Kalaburagi | ಬಾಲಕಿ ಮೇಲೆ ಅತ್ಯಾಚಾರ ಆರೋಪ : ಆರೋಪಿಗೆ 21 ವರ್ಷ ಜೈಲು, 35 ಸಾವಿರ ದಂಡ

ಸಾಂದರ್ಭಿಕ ಚಿತ್ರ
ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸಿ, ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಲು ಕಾರಣವಾದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷದ ಯುವಕನಿಗೆ ನ್ಯಾಯಾಲಯ 21 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು 35 ಸಾವಿರ ರೂ. ದಂಡ ವಿಧಿಸಿದೆ.
ನಗರದ ಎಂ.ಬಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಜಿಪುರ ಪ್ರದೇಶದ ನಿವಾಸಿ ಶುಭಂ ವರದಾ (20), ದತ್ತು ಕಾಂಬಳೆ ಅವರ ಪುತ್ರ, ಶಿಕ್ಷೆಗೆ ಗುರಿಯಾದ ಆರೋಪಿ.
17 ವರ್ಷದ ಬಾಲಕಿ ಪಿಯುಸಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಆರೋಪಿ ಇನ್ಸ್ಟಾಗ್ರಾಂ ಮೂಲಕ ಆಕೆಗೆ ಪರಿಚಯವಾಗಿದ್ದ. ಬಳಿಕ ಕಾಲೇಜಿಗೆ ಹೋಗುವಾಗ ಮತ್ತು ಬರುವಾಗ ಹಿಂಬಾಲಿಸಿ, ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಬಾಲಕಿಯನ್ನು ಬೇರೆ ಕಾಲೇಜಿಗೆ ವರ್ಗಾಯಿಸಿದ್ದರು. ಆದರೂ ಆರೋಪಿ ಕಿರುಕುಳ ಮುಂದುವರಿಸಿದ್ದ ಎಂದು ದೂರಲಾಗಿತ್ತು.
2024ರ ನವೆಂಬರ್ 5ರಂದು ಬಾಲಕಿಯನ್ನು ಕಲಬುರಗಿ ನಗರದ ನ್ಯೂ ಜೇವರ್ಗಿ ರಸ್ತೆಯಲ್ಲಿರುವ ಲಾಡ್ಜ್ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. 2025ರ ಜೂನ್ 10ರಂದು ಚಿಕಿತ್ಸೆಗಾಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 11ರಂದು ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗು ಗರ್ಭದಲ್ಲಿಯೇ ಮೃತಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಪ್ರಾಪ್ತ ಬಾಲಕಿಯೂ ಮೃತಪಟ್ಟಿದ್ದಳು.
ಈ ಕುರಿತು ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಗಳಾದ ಶಿವಾನಂದ ಎಸ್. ವಾಲಿಕಾರ ಮತ್ತು ಖಾಜಾ ಹುಸೇನ್ ತನಿಖೆ ನಡೆಸಿ, ಭಾರತೀಯ ನ್ಯಾಯ ಸಂಹಿತೆಯ ಕಲಂ 64(2), 351(2) ಹಾಗೂ ಪೋಕ್ಸೊ ಕಾಯ್ದೆಯ ಕಲಂ 4 ಮತ್ತು 6ರ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯದ ಎಫ್ಟಿಎಸ್ಸಿ-1 ನ್ಯಾಯಾಧೀಶರಾದ ಎಸ್.ಎಲ್. ಚವ್ಹಾಣ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯ ಕಲಂ 6ರ ಅಡಿಯಲ್ಲಿ 21 ವರ್ಷಗಳ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ಬಿಎನ್ಎಸ್ ಕಲಂ 351(2)ರ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ನವೆಂಬರ್ 12ರಂದು ತೀರ್ಪು ನೀಡಿದ್ದಾರೆ.
ಇದಲ್ಲದೆ, ಸಂತ್ರಸ್ತೆಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 8 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.






