Kalaburagi | ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣವೇ ನಿಜವಾದ ಸ್ವಾತಂತ್ರ್ಯದ ಸಂಕೇತ: ಡಾ. ದಾಕ್ಷಾಯಿಣಿ ಅವ್ವಾಜಿ

ಕಲಬುರಗಿ: ದೇಶದ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ, ಮಹಿಳೆಯರ ಶೈಕ್ಷಣಿಕ ಹಾಗೂ ಆರ್ಥಿಕ ಸಬಲೀಕರಣ ಮತ್ತು ರೈತರ ಬದುಕಿನಲ್ಲಿ ಸುಧಾರಣೆ ಕಂಡುಬರುವುದು ನಿಜವಾದ ಸ್ವಾತಂತ್ರ್ಯದ ಸಂಕೇತಗಳಾಗಿವೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಹೇಳಿದರು.
ನಗರದ ಶರಣಬಸವ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತ ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣಾ, ಬಾಹ್ಯಾಕಾಶ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸುವತ್ತ ವೇಗವಾಗಿ ಮುನ್ನಡೆಯುತ್ತಿದೆ. ಈ ಸಾಧನೆಯ ಹಿಂದೆ ವಿಜ್ಞಾನಿಗಳು, ತಂತ್ರಜ್ಞರು, ಯುವಜನರು ಹಾಗೂ ರೈತರ ನಿರಂತರ ಪರಿಶ್ರಮವಿದೆ ಎಂದರು.
ರೈತರ ಬದುಕು ಸುಧಾರಿಸುವುದರ ಜೊತೆಗೆ ಮಹಿಳೆಯರ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಎಲ್ಲರೂ ಶ್ರಮಿಸಬೇಕು. ಉತ್ತಮ ಗುಣಮಟ್ಟದ ಶಿಕ್ಷಣವು ಜವಾಬ್ದಾರಿಯುತ ಹಾಗೂ ಉತ್ತಮ ನಾಗರಿಕರನ್ನು ರೂಪಿಸುವ ಭದ್ರ ಬುನಾದಿಯಾಗಿದ್ದು, ಅಂತಹ ನಾಗರಿಕರು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯ ಎಂದರು.
ಅಪ್ಪಾಜಿಯವರ ಶೈಕ್ಷಣಿಕ ಕೊಡುಗೆ ಅನನ್ಯ :
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಅವಕಾಶಗಳನ್ನು ವಿಸ್ತರಿಸುವಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾದ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಕೊಡುಗೆ ಅನನ್ಯವಾಗಿದೆ ಎಂದು ಡಾ. ಅವ್ವಾಜಿ ಸ್ಮರಿಸಿದರು.
ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಿದ ಅಪ್ಪಾಜಿಯವರ ಆದರ್ಶಗಳು ಇಂದಿಗೂ ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡುತ್ತಿವೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜನರು ಹಾಗೂ ಮಹಿಳೆಯರ ಶೈಕ್ಷಣಿಕ ಸಬಲೀಕರಣಕ್ಕೆ ಆದ್ಯತೆ ನೀಡುವುದು ಮತ್ತು ಶಿಕ್ಷಣ ಸಂಸ್ಥೆಗಳನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವುದು ಅವರ ಕನಸಿನ ಸಾಕಾರವಾಗಿದೆ ಎಂದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಹಾಗೂ ಕೈಗೆಟುಕುವ ದರದಲ್ಲಿ ಶಿಕ್ಷಣ ನೀಡುತ್ತಿದ್ದು, ಇಲ್ಲಿಂದ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ದೇಶ-ವಿದೇಶಗಳ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಸ್ವಾತಂತ್ರ್ಯ ಎಂದರೆ ಜವಾಬ್ದಾರಿಯುತ ಜೀವನ :
ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಅನೇಕ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯವೆಂದರೆ ಕೇವಲ ವಿದೇಶಿ ಆಳ್ವಿಕೆಯಿಂದ ಮುಕ್ತಿಯಾಗುವುದಲ್ಲ; ಪ್ರತಿಯೊಬ್ಬರೂ ಗೌರವಯುತ ಹಾಗೂ ಜವಾಬ್ದಾರಿಯುತ ಜೀವನ ನಡೆಸುವ ಅವಕಾಶವೂ ಆಗಿದೆ ಎಂದರು.
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪ್ರಾಮಾಣಿಕತೆ, ದೇಶಭಕ್ತಿ ಹಾಗೂ ಸಾಮಾಜಿಕ ಹೊಣೆಗಾರಿಕೆಯಂತಹ ಮೌಲ್ಯಗಳನ್ನು ಬೆಳೆಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಕರೆ ನೀಡಿದರು.
ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪೂಜ್ಯ ದೊಡ್ಡಪ್ಪ ಅಪ್ಪ ಅವರು, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಸಮಾಜದ ಎಲ್ಲ ವರ್ಗದ ಜನರು ಶ್ರಮಿಸುವುದು ಇಂದಿನ ಅಗತ್ಯವಾಗಿದೆ. ಪ್ರತಿಯೊಬ್ಬ ಭಾರತೀಯನ ಧ್ಯೇಯ ‘ರಾಷ್ಟ್ರ ಮೊದಲು’ ಎಂಬುದಾಗಿರಬೇಕು. ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ನಿರಂತರವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಸಬಲೀಕರಣಕ್ಕಾಗಿ ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ನಿರ್ದೇಶಕ ಪ್ರೊ. ವಿ.ಡಿ. ಮೈತ್ರಿ, ಕುಲಸಚಿವ ಡಾ. ಲಕ್ಷ್ಮೀ ಪಾಟೀಲ ಮಾಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ, ಹಣಕಾಸು ಅಧಿಕಾರಿ ಡಾ. ಕಿರಣ ಮಾಕಾ ಸೇರಿದಂತೆ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು ಹಾಗೂ ಗಣ್ಯರು ಉಪಸ್ಥಿತರಿದ್ದರು.






