Kalaburagi | ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಸಾಂದರ್ಭಿಕ ಚಿತ್ರ (AI)
ಕಲಬುರಗಿ: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿರುವ ವಿಶೇಷ ಪೋಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 55 ಸಾವಿರ ರೂ. ದಂಡ ವಿಧಿಸಿದೆ.
ಸೇಡಂ ತಾಲೂಕಿನ ಕುರಕುಂಟಾ ಪೊಲೀಸ್ ಠಾಣೆ ವ್ಯಾಪ್ತಿಯ ಹೈಯ್ಯಾಳ ಗ್ರಾಮದ ನಿವಾಸಿ ನವೀನಕುಮಾರ ದುದ್ಯಾಲ (22) ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.
ಪ್ರಕರಣದ ವಿವರದ ಪ್ರಕಾರ, ಆರೋಪಿಯು ಅಪ್ರಾಪ್ತ ಬಾಲಕಿಯೊಂದಿಗೆ ಪರಿಚಯ ಬೆಳೆಸಿ, ಆಕೆಗೆ ಕಿರುಕುಳ ನೀಡಿ, ಬಳಿಕ ಬೆದರಿಕೆ ಒಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಬಾಲಕಿಯನ್ನು ಊರಿನಿಂದ ಕರೆದುಕೊಂಡು ಹೋಗಿ ಹೊರ ರಾಜ್ಯದಲ್ಲಿ ವಾಸ್ತವ್ಯ ಹೂಡಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿತ್ತು.
ಬಾಲಕಿಯನ್ನು ಪತ್ತೆಹಚ್ಚಿ ರಕ್ಷಿಸಿದ ಕುರಕುಂಟಾ ಪೊಲೀಸರು ಸಮಗ್ರ ತನಿಖೆ ನಡೆಸಿ, ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಆಧಾರದ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿಯ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ವಿಶೇಷ ಪೋಕ್ಸೊ ನ್ಯಾಯಾಲಯ–ಎಫ್ಟಿಎಸ್ಸಿ-1) ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅವರು ಸಾಕ್ಷ್ಯಾಧಾರಗಳು, ವೈದ್ಯಕೀಯ ವರದಿಗಳು ಹಾಗೂ ಸಾಕ್ಷಿದಾರರ ಹೇಳಿಕೆಗಳನ್ನು ಪರಿಗಣಿಸಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಪು ನೀಡಿದರು.
ನ್ಯಾಯಾಲಯವು ಪೋಕ್ಸೊ ಕಾಯ್ದೆಯ ಕಲಂ 6ರ ಅಡಿಯಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ. ಪೋಕ್ಸೊ ಕಾಯ್ದೆಯ ಕಲಂ 12ರ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ಬಿಎನ್ಎಸ್ ಕಲಂ 78ರ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ಹಾಗೂ ಬಿಎನ್ಎಸ್ ಕಲಂ 351(2)ರ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಇದೇ ವೇಳೆ, ಸಂತ್ರಸ್ತ ಬಾಲಕಿಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ 5 ಲಕ್ಷ ರೂ. ಪರಿಹಾರಧನ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ತೀರ್ಪಿನ ದಿನಾಂಕದಿಂದ ಒಂದು ತಿಂಗಳೊಳಗೆ ಪರಿಹಾರಧನ ವಿತರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪ್ರಕರಣದ ತನಿಖೆಯನ್ನು ಸೇಡಂ ವೃತ್ತದ ಸಿಪಿಐ ಮಹಾದೇವಪ್ಪ ಹಾಗೂ ಕುರಕುಂಟಾ ಪೊಲೀಸ್ ಠಾಣೆಯ ಪಿಎಸ್ಐ ಚಿದಾನಂದ ನಡೆಸಿದ್ದರು. ಸರ್ಕಾರಿ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.






