Kalaburagi | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗೆ 25 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ

ಸಾಂದರ್ಭಿಕ ಚಿತ್ರ
ಕಲಬುರಗಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ಎಫ್ಟಿಎಸ್ಟಿ-1 ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ ಆದೇಶಿಸಿದ್ದಾರೆ.
ಶಿಕ್ಷೆಗೊಳಗಾದ ಆರೋಪಿಯನ್ನು ಕಲ್ಲಹಂಗರಗಾ ಗ್ರಾಮದ ಸಂಪತ ಅಣ್ಣಾರಾವ ಕಿವಡಕರ್ (30) ಎಂದು ಗುರುತಿಸಲಾಗಿದೆ. 2025ರ ಜುಲೈ 26ರಂದು 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 25 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದೆ.
ಅಲ್ಲದೆ, ಸಂತ್ರಸ್ತ ಬಾಲಕಿಗೆ ಒಂದು ತಿಂಗಳೊಳಗಾಗಿ ಕಾನೂನು ಸೇವಾ ಪ್ರಾಧಿಕಾರದ ಮೂಲಕ 5 ಲಕ್ಷ ರೂ. ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.






