Kalaburagi | ಸಾಂಬಾರ್ ಪದಾರ್ಥಗಳ ಅಭಿವೃದ್ಧಿ ಮಂಡಳಿಗೆ ಶಿವಶರಣಪ್ಪ ಕೋಬಾಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ಸಾಂಬಾರ್ ಪದಾರ್ಥಗಳ ಅಭಿವೃದ್ಧಿ ಮಂಡಳಿಗೆ ಜೇವರ್ಗಿ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಶಿವಶರಣಪ್ಪ ಕೋಬಾಳ ಅವರನ್ನು ಸರ್ಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಶಿವಶರಣಪ್ಪ ಕೋಬಾಳ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಹಲವು ವರ್ಷಗಳಿಂದ ನಿಷ್ಠೆ, ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಸರಳತೆ, ಸಜ್ಜನಿಕೆ, ಉತ್ತಮ ವ್ಯಕ್ತಿತ್ವ ಹಾಗೂ ಜನಪರ ಕಾಳಜಿಯಿಂದ ಗುರುತಿಸಿಕೊಂಡಿರುವ ಅವರು, ತಮಗೆ ವಹಿಸಿರುವ ನೂತನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
ಕರ್ನಾಟಕ ರಾಜ್ಯ ಸಾಂಬಾರ್ ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಪ್ರಗತಿ ಹಾಗೂ ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅವರು ಮಹತ್ವದ ಕೊಡುಗೆ ನೀಡಲಿದ್ದಾರೆ ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.
ಶಿವಶರಣಪ್ಪ ಕೋಬಾಳ ಅವರ ಪಕ್ಷ ನಿಷ್ಠೆ ಹಾಗೂ ಹಿರಿತನವನ್ನು ಪರಿಗಣಿಸಿ ಅಧ್ಯಕ್ಷ ಸ್ಥಾನ ಅಥವಾ ವಿಧಾನ ಪರಿಷತ್ ಸದಸ್ಯ ಸ್ಥಾನದಂತಹ ಉನ್ನತ ಪ್ರಾತಿನಿಧ್ಯ ನೀಡಬೇಕಿತ್ತು. ಆದರೂ ಜೇವರ್ಗಿ ಶಾಸಕ ಹಾಗೂ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ಅವರು ತಡವಾಗಿಯಾದರೂ ಹಿರಿಯ ನಾಯಕನನ್ನು ಗುರುತಿಸಿ ಸ್ಥಾನ ಕಲ್ಪಿಸಿರುವುದು ಸಂತಸ ತಂದಿದೆ. ಕೋಬಾಳ ಅವರನ್ನು ಮಂಡಳಿಯ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.






