ಕಲಬುರಗಿ | ಶಿಕ್ಷಕರ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಭಿನಂದನೆ

ಕಲಬುರಗಿ : ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ಶಿಕ್ಷಕರ ಭವನ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನವನ್ನು ರಿಯಾಯಿತಿ ದರದಲ್ಲಿ ಲೀಸ್‌ಗೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರ ನಿಯೋಗವು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಧನ್ಯವಾದ ಸಲ್ಲಿಸಿದೆ.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಶೇಖರೋಜಾ ಸರ್ವೆ ನಂ.111/2ರಲ್ಲಿ ಇರುವ 25,166 ಚದರ ಅಡಿ ಸಿ.ಎ. ನಿವೇಶನವನ್ನು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕ, ಕಲಬುರಗಿಗೆ 30 ವರ್ಷಗಳ ಅವಧಿಗೆ ರಿಯಾಯಿತಿ ದರದಲ್ಲಿ ಲೀಸ್ ನೀಡಲು ಜ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಶಿಕ್ಷಕರ ಶೈಕ್ಷಣಿಕ ಹಾಗೂ ಸಂಘಟನಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಶಿಕ್ಷಕರ ಭವನ ನಿರ್ಮಾಣಕ್ಕಾಗಿ ನಿವೇಶನ ಒದಗಿಸಲು ವಿಶೇಷ ಮುತುವರ್ಜಿ ವಹಿಸಿ, ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿಸಿಕೊಟ್ಟ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ನಿವೇಶನ ಮಂಜೂರಿಗೆ ಪರೋಕ್ಷವಾಗಿ ಬೆಂಬಲ ನೀಡಿದ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್ ಹೂಗಾರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳುಂಡಗಿ, ಶಿಕ್ಷಕರ ಸಂಘದ ಕಾರ್ಯದರ್ಶಿಗಳಾದ ಜಮೀಲ್ ಮತ್ತು ಇಮ್ರಾನ್ ಅಹಮದ್, ಪದಾಧಿಕಾರಿಗಳಾದ ರಾಜೇಶ್ ನೀಲಹಳ್ಳಿ, ಮಲ್ಲಿಕಾರ್ಜುನ ಸಲಗರ, ರಾಘವೇಂದ್ರ ರೆಡ್ಡಿ, ಮೊಹಮ್ಮದ್ ರಫೀಕ್, ದೇವೇಂದ್ರ ಬಿರಾದಾರ್, ಚನ್ನಬಸಪ್ಪ ಬಿರಾದಾರ್, ಬಾಷಾ ಪಟೇಲ್, ರೇಣುಕಾ ಡಾಂಗೆ, ಭಾಗ್ಯಲಕ್ಷ್ಮಿ ಗಿರೇಗೋಳ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳಾದ ಚಂದ್ರಕಾಂತ ಏರಿ, ಧರ್ಮರಾಯ ಜವಳಿ, ಎಂ.ಬಿ. ಪಾಟೀಲ್, ಸಂತೋಷ್ ಗಂಗೂ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.







