Kalaburagi | ತಂಬಾಕು ನಿಯಂತ್ರಣ ವಿಶೇಷ ಕಾರ್ಯಾಚರಣೆ: 310 ಪ್ರಕರಣ ದಾಖಲು, 1.02 ಲಕ್ಷ ರೂ. ದಂಡ ವಸೂಲಿ

ಕಲಬುರಗಿ : ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯ ನಿಯಂತ್ರಣಕ್ಕೆ ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು, ಒಟ್ಟು 310 ಪ್ರಕರಣಗಳನ್ನು ದಾಖಲಿಸಿ 1,02,490 ರೂ. ದಂಡ ವಸೂಲಿ ಮಾಡಿದ್ದಾರೆ.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರ ಸೂಚನೆ ಹಾಗೂ ಮಾರ್ಗದರ್ಶನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ‘ತಂಬಾಕು ಮುಕ್ತ ಯುವ ಅಭಿಯಾನ 4.0’ ಅಂಗವಾಗಿ ಈ ಜಾಗೃತಿ ಮತ್ತು ದಂಡ ವಸೂಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಡಾ. ಅಮರದೀಪ ಪವಾರ ಅವರ ನೇತೃತ್ವದಲ್ಲಿ ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ ಒಟ್ಟು 54 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣ ಹಾಗೂ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧಕ್ಕೆ ಸಂಬಂಧಿಸಿದಂತೆ ಕೋಟ್ಪಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಯಿತು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದವರು ಹಾಗೂ ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ಧ ಕೋಟ್ಪಾ ಕಾಯ್ದೆಯ ಸೆಕ್ಷನ್ 4, 5 ಮತ್ತು 6(ಎ), (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಯಿತು.
ಇದೇ ವೇಳೆ ಸಾರ್ವಜನಿಕರು, ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯದ ದುಷ್ಪರಿಣಾಮಗಳ ಕುರಿತು ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಯಿತು. ನಿಯಮ ಉಲ್ಲಂಘನೆ ಮರುಕಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದರು.
ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವೀರನಾಥ್, ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿನಾಯಕ ಜೋಶಿ, ಜಯಪ್ರಕಾಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ್ತಿ ಸುಜಾತಾ ಪಾಟೀಲ, ಡಿಪಿಸಿ ಎನ್‌ಸಿಡಿ ಡಾ. ಪ್ರೀತಮ್ ಎ. ತೇಲ್ಕರ್, ಜಿಲ್ಲಾ ಸಾಮಾಜಿಕ ಕಾರ್ಯಕರ್ತೆ ಆರತಿ ಧನಶ್ರೀ, ಐಡಿಎಸ್‌ಪಿ ಡೇಟಾ ಮ್ಯಾನೇಜರ್ ಸುಧಾಕರ್, ಗಣಕಯಂತ್ರ ಸಹಾಯಕ ರವಿಕುಮಾರ್ ಪೂಜಾರಿ, ಕಚೇರಿ ನಿರ್ವಹಣೆಯ ಹಿರೇಗೆಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.






