Kalaburagi | ಮಾದಕ ವ್ಯಸನದಿಂದ ದೂರವಿದ್ದು ಕಾನೂನು ಅರಿವು ಬೆಳೆಸಿಕೊಳ್ಳಿ: ನ್ಯಾ.ಲಕ್ಷ್ಮೀನಾರಾಯಣ

ಕಲಬುರಗಿ: ಇಂದಿನ ಯುವಜನತೆ ಹೆತ್ತವರ ನಿರೀಕ್ಷೆಗಳನ್ನು ಈಡೇರಿಸುವಂತೆ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಕುಟುಂಬ, ಸಮಾಜ ಹಾಗೂ ದೇಶಕ್ಕೆ ಕೀರ್ತಿ ತರಬೇಕು. ಮಾದಕ ವ್ಯಸನ ಮತ್ತು ಲೈಂಗಿಕ ದೌರ್ಜನ್ಯದಂತಹ ಸಾಮಾಜಿಕ ಪಿಡುಗುಗಳಿಂದ ದೂರವಿದ್ದು, ಕಾನೂನಿನ ಅರಿವಿನೊಂದಿಗೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಕರೆ ನೀಡಿದರು.
ನಗರದ ಶರಣಬಸವೇಶ್ವರ ವಿಶ್ವವಿದ್ಯಾಲಯದ ಪೂಜ್ಯ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಪೋಕ್ಸೋ ಕಾಯ್ದೆ ಹಾಗೂ ಮಾದಕ ದ್ರವ್ಯ ವ್ಯಸನ ಮುಕ್ತ” ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಮದ್ಯ, ಗಾಂಜಾ ಹಾಗೂ ತಂಬಾಕು ಸೇವನೆಯಂತಹ ದುಶ್ಚಟಗಳಿಗೆ ಯುವಕರು ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ವ್ಯಸನಗಳಿಂದ ಕ್ಯಾನ್ಸರ್ ಸೇರಿದಂತೆ ಮಾರಕ ಕಾಯಿಲೆಗಳು ಉಂಟಾಗುತ್ತಿದ್ದು, ಅಮೂಲ್ಯ ಜೀವಗಳು ಹಾಳಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
2012ರ ನಿರ್ಭಯ ಪ್ರಕರಣದ ಬಳಿಕ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ದುಷ್ಟ ಆಲೋಚನೆಗಳಿಗೆ ಬಲಿಯಾಗದೆ ಶಿಕ್ಷಣದತ್ತ ಗಮನಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶ ಶಶಿಧರ ಶೆಟ್ಟಿ ಹೆಚ್. ಮಾತನಾಡಿ, ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. ಜನ್ಮ ಪ್ರಮಾಣಪತ್ರ, ಚಾಲನಾ ಪರವಾನಗಿ, ರಸ್ತೆ ಸುರಕ್ಷತೆ ಸೇರಿದಂತೆ ದೈನಂದಿನ ಬದುಕಿಗೆ ಸಂಬಂಧಿಸಿದ ಮೂಲಭೂತ ಕಾನೂನುಗಳ ಅರಿವು ಹೊಂದಬೇಕು ಎಂದರು.
ಬಡವರು ಮತ್ತು ಕಾರ್ಮಿಕ ವರ್ಗದವರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ಹಾಗೂ ಲೋಕ ಅದಾಲತ್ ಮೂಲಕ ತ್ವರಿತ ನ್ಯಾಯ ದೊರೆಯುತ್ತಿದೆ ಎಂದು ತಿಳಿಸಿದರು.
18 ವರ್ಷದೊಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪೋಕ್ಸೋ ಕಾಯ್ದೆ ಪರಿಣಾಮಕಾರಿ ಸಾಧನವಾಗಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದರೆ ಧೈರ್ಯದಿಂದ ವಿರೋಧಿಸಬೇಕು. ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಅಥವಾ ಮಕ್ಕಳ ಮೇಲಿನ ಯಾವುದೇ ದೌರ್ಜನ್ಯ ಕಂಡುಬಂದರೆ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಮಾದಕ ವಸ್ತುಗಳ ಕಳ್ಳಸಾಗಣೆ ಮತ್ತು ಮಾರಾಟದ ಬಗ್ಗೆ ಮಾಹಿತಿ ದೊರೆತರೆ ಸಾರ್ವಜನಿಕರು 1933 ಸಹಾಯವಾಣಿಗೆ ಕರೆ ಮಾಡಿ ಸಮಾಜದ ರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕಾನೂನು ಅರಿವನ್ನೂ ಬೆಳೆಸಿಕೊಳ್ಳಬೇಕು. ಎಸ್‌ಎಸ್‌ಎಲ್‌ಸಿ ನಂತರದ ಎರಡು ವರ್ಷಗಳು ಜೀವನದ ಅತ್ಯಂತ ಮಹತ್ವದ ಹಂತವಾಗಿದ್ದು, ಸ್ಪಷ್ಟ ಗುರಿಯೊಂದಿಗೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ನಾಗರಿಕರಾಗಿ ಬೆಳೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಾಲಸುಬ್ರಮಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ, ಮಾನವ ಹಕ್ಕುಗಳ ರಕ್ಷಣಾ ಸಂಸ್ಥೆಯ ಸದಸ್ಯ ಮಹೋನ ನಲವಾಡೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ವಿಶ್ವರಾಥ್ಯ ಕೆ. ಇಜೇರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಂಜುಳಾ ಬಿ. ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುಳಾದೇವಿ ರೆಡ್ಡಿ ಕಾರ್ಯಕ್ರಮ ನಿರೂಪಿಸಿದರೆ, ಭರತೇಶ್ ಶೀಲವಂತ ವಂದಿಸಿದರು.






