Kalaburagi | ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ: ರೌಡಿಗಳಿಗೆ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ.ಎಚ್ಚರಿಕೆ

ಕಲಬುರಗಿ : ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನೇತೃತ್ವದಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್‌ಗಳ ರೌಡಿ ಪರೇಡ್ ನಡೆಸಲಾಯಿತು.
ಪರೇಡ್ ವೇಳೆ ರೌಡಿಶೀಟರ್‌ಗಳ ವಿರುದ್ಧ ದಾಖಲಾಗಿರುವ ಅಪರಾಧ ಪ್ರಕರಣಗಳ ಸಮಗ್ರ ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತರು, ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಅಪರಾಧ ನಿಯಂತ್ರಣಕ್ಕಾಗಿ ರೌಡಿಶೀಟರ್‌ಗಳ ಮೇಲೆ ನಿರಂತರ ನಿಗಾ ವಹಿಸಲಾಗುತ್ತಿದ್ದು, ಈ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‘ಆಂಟಿ ರೌಡಿ ಸ್ಕ್ವಾಡ್’ ರಚಿಸಲಾಗಿದೆ ಎಂದು ತಿಳಿಸಿದರು.
ನ್ಯಾಯಾಲಯಕ್ಕೆ ಹಾಜರಾಗದ ಹಾಗೂ ಪೊಲೀಸ್ ನೋಟಿಸ್‌ಗಳಿಗೆ ಸ್ಪಂದಿಸದ ರೌಡಿಶೀಟರ್‌ಗಳನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರತಿ ಠಾಣೆ ವ್ಯಾಪ್ತಿಯ ಟಾಪ್-10 ರೌಡಿಶೀಟರ್‌ಗಳನ್ನು ಪರೇಡ್‌ಗೆ ಹಾಜರುಪಡಿಸಲಾಗಿದೆ ಎಂದು ಹೇಳಿದರು.
“ತಪ್ಪುಗಳನ್ನು ತಿದ್ದಿಕೊಂಡು ಉತ್ತಮ ಜೀವನ ನಡೆಸಲು ಬಯಸುವವರಿಗೆ ಅವಕಾಶ ನೀಡುತ್ತೇವೆ. ಆದರೆ ಕಾನೂನಿಗೆ ಸವಾಲು ಹಾಕುವವರ ವಿರುದ್ಧ ಯಾವುದೇ ರಾಜಿ ಇಲ್ಲ,” ಎಂದು ಎಚ್ಚರಿಕೆ ನೀಡಿದ ಅವರು, ಇದುವರೆಗೆ 7 ರೌಡಿಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ್ದು, 21 ರೂಢಿಗತ ಅಪರಾಧಿಗಳನ್ನು ಗಡಿಪಾರು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನೂ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಹಾಗೂ ಗಡಿಪಾರು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಮುಂದುವರಿದಿದೆ ಎಂದು ತಿಳಿಸಿದರು.
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆ ಕಾಪಾಡುವುದು ಪೊಲೀಸ್ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದ್ದು, ಕಾನೂನು ಉಲ್ಲಂಘಿಸಿ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಡಿಸಿಪಿ ಶಾಲೂ, ಹಿರಿಯ ಪೊಲೀಸ್ ಅಧಿಕಾರಿಗಳು, ವಿವಿಧ ಪೊಲೀಸ್ ಠಾಣೆಗಳ ಇನ್‌ಸ್ಪೆಕ್ಟರ್‌ಗಳು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.






