Kalaburagi | ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ, ಧೈರ್ಯದಿಂದ ಸವಾಲುಗಳನ್ನು ಎದುರಿಸಿ: ಶ್ರೀನಿವಾಸ ನವಲೆ
ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ

ಕಲಬುರಗಿ: ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಹೊರತು ಆತ್ಮಹತ್ಯೆಯೇ ಸಮಸ್ಯೆಗೆ ಉತ್ತರ ಅಲ್ಲ. ಪ್ರತಿಯೊಬ್ಬರೂ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಮನೋಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.
ಗುರುವಾರ ನಗರದ ಆದರ್ಶನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಆತ್ಮಹತ್ಯೆಯ ಕುರಿತ ದೃಷ್ಟಿಕೋನವನ್ನು ಬದಲಾಯಿಸುವುದು – ಸಂಭಾಷಣೆಯನ್ನು ಪ್ರಾರಂಭಿಸಿ” ಎಂಬ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ಕುಟುಂಬದಲ್ಲಿ ಹುಟ್ಟಿ ಬೆಳೆದು ಆ ಕುಟುಂಬಕ್ಕೆ ಆಸರೆಯಾಗಬೇಕಾದವರು ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಂಡರೆ ಆ ಕುಟುಂಬಕ್ಕೆ ಆಗುವ ನಷ್ಟವನ್ನು ಭರಿಸಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಆತ್ಮಹತ್ಯೆಯ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಅಪರಾಧಿಯಂತೆ ಕಾಣದೆ, ಮಾನಸಿಕ ಒತ್ತಡ ಅಥವಾ ಖಿನ್ನತೆಯಲ್ಲಿರುವ ವ್ಯಕ್ತಿಯಾಗಿ ಪರಿಗಣಿಸಬೇಕು. ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ–2017ರಡಿ ಆತ್ಮಹತ್ಯೆ ಯತ್ನವನ್ನು ಅಪರಾಧ ಮುಕ್ತಗೊಳಿಸಲಾಗಿದ್ದು, ಇಂತಹವರನ್ನು ಬಂಧಿಸುವ ಬದಲು ಆಸ್ಪತ್ರೆಗೆ ದಾಖಲಿಸಿ ಕೌನ್ಸೆಲಿಂಗ್ ಹಾಗೂ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಅವರು ವಿವರಿಸಿದರು.
ಕೆಲವರು ಅಧಿಕಾರಿಗಳು, ಶಿಕ್ಷಕರು ಅಥವಾ ಪೋಷಕರನ್ನು ಬೆದರಿಸಲು ಆತ್ಮಹತ್ಯೆಯ ಬೆದರಿಕೆ ಹಾಕುವ ಸಂದರ್ಭಗಳೂ ಇವೆ. ಇಂತಹ ದುರುದ್ದೇಶಪೂರಿತ ಕೃತ್ಯಗಳಿಗೆ ಕಾನೂನಿನಡಿ ಶಿಕ್ಷೆ ಅನ್ವಯಿಸುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ. ರವಿಕಾಂತಿ ಕ್ಯಾತನಾಳ ಮಾತನಾಡಿ, ವಿದ್ಯಾರ್ಥಿಗಳು ಅಂಕಗಳಿಗಿಂತ ಕಲಿಕೆ ಮತ್ತು ಶ್ರಮಕ್ಕೆ ಮಹತ್ವ ನೀಡಬೇಕು. ಪರೀಕ್ಷೆ, ವೈಫಲ್ಯ ಅಥವಾ ಇತರೆ ಸಮಸ್ಯೆಗಳಿಂದ ಧೃತಿಗೆಡದೆ ಪೋಷಕರು, ಶಿಕ್ಷಕರು ಅಥವಾ ಆಪ್ತರೊಂದಿಗೆ ಮುಕ್ತವಾಗಿ ಮಾತನಾಡಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೇವನಗೌಡ ಪಾಟೀಲ್ ಮಾತನಾಡಿ, ಸಣ್ಣ-ಸಣ್ಣ ವಿಚಾರಗಳಿಗೆ ನಿರಾಶರಾಗದೆ ಧನಾತ್ಮಕ ಚಿಂತನೆಯೊಂದಿಗೆ ಜೀವನವನ್ನು ಎದುರಿಸಬೇಕು. ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ದೂರವಿದ್ದು ಶಿಕ್ಷಣದತ್ತ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಜಿಮ್ಸ್ ಆಸ್ಪತ್ರೆಯ ಮನೋವೈದ್ಯ ಡಾ. ಪ್ರಭುಕಿರಣ್ ಮಾತನಾಡಿ, ಪರೀಕ್ಷಾ ಭಯ, ಪ್ರೇಮ ವೈಫಲ್ಯ, ವ್ಯಸನ ಸೇರಿದಂತೆ ಹಲವು ಕಾರಣಗಳಿಂದ ಯುವಕರು ತೀವ್ರ ನಿರ್ಧಾರಗಳಿಗೆ ಶರಣಾಗುತ್ತಿರುವುದು ಕಳವಳಕಾರಿ ಸಂಗತಿ. ಸಮಸ್ಯೆಗಳನ್ನು ಮನಸ್ಸಿನಲ್ಲೇ ಇಟ್ಟುಕೊಳ್ಳದೆ ಕುಟುಂಬಸ್ಥರು, ಸ್ನೇಹಿತರು, ಶಿಕ್ಷಕರು ಅಥವಾ ಮಾನಸಿಕ ಆರೋಗ್ಯ ತಜ್ಞರೊಂದಿಗೆ ಮುಕ್ತವಾಗಿ ಹಂಚಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ. ಮಹಮ್ಮದ್ ಇರಫಾನ್ ಮಹಾಗಾವಿ ಪಿಪಿಟಿ ಮೂಲಕ ಆತ್ಮಹತ್ಯೆ ತಡೆ ಕುರಿತು ಸವಿಸ್ತಾರ ಉಪನ್ಯಾಸ ನೀಡಿದರು. ಇದೇ ವೇಳೆ ಶ್ರೀನಿವಾಸ ನವಲೆ ಅವರು ವಿದ್ಯಾರ್ಥಿಗಳಿಗೆ ಆತ್ಮಹತ್ಯೆ ತಡೆ ಜಾಗೃತಿ ಪ್ರತಿಜ್ಞೆ ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲ ರಾಜು ಗಂಗಾಧರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ, ವೈದ್ಯಕೀಯ ಇಲಾಖೆಯ ಅಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರು. ಗಣಿತ ಉಪನ್ಯಾಸಕ ನರಸಪ್ಪ ರಂಗೋಲಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ವಿಠ್ಠಲ ಭಾವಿಮನಿ ನಿರೂಪಿಸಿದರು. ಭೌತಶಾಸ್ತ್ರ ಉಪನ್ಯಾಸಕ ಶಿವಕುಮಾರ್ ವಂದಿಸಿದರು.






