Kalaburagi | ಸಾರಡಗಿ ಬ್ಯಾರೇಜ್‌ನ ನೀರು ಪೋಲಾಗದಂತೆ ಮುನ್ನೆಚ್ಚರಿಕೆ ವಹಿಸಿ: ಡಿಸಿ ಇಕ್ರಂ ಶರೀಫ್ ಸೂಚನೆ

ಕಲಬುರಗಿ: ಸಾರಡಗಿ ಬಿ.ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಭೇಟಿ ನೀಡಿ, ಬ್ಯಾರೇಜ್‌ನಿಂದ ನೀರು ಪೋಲಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ರಾಜು, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWS) ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸ್ತುತ ನೀರಿನ ಲಭ್ಯತೆ ಕಡಿಮೆ ಇರುವುದರಿಂದ ಬ್ಯಾರೇಜ್ ನಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಬೇಕು. ಬೇರೆ ಉದ್ದೇಶಗಳಿಗೆ ನೀರು ಬಳಸದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಲ್ಲದೆ, ಬ್ಯಾರೇಜ್‌ನಿಂದ ನೀರು ಎತ್ತುವ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಪೂಜಾರಿ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶ್ರವಣ್ ಕುಮಾರ್, ಸಹಾಯಕ ಆಯುಕ್ತೆ ರಿತಿಕಾ ವರ್ಮಾ ಹಾಗೂ ಕಲಬುರಗಿ ತಹಶೀಲ್ದಾರ್ ಕೆ.ಆನಂದಶೀಲ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.




