ಕಲಬುರಗಿ | ಅಲೆಮಾರಿ ಹೆಳವ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಕನ್ನಡ ಭವನದಲ್ಲಿ 2024-25ನೇ ಸಾಲಿನ SSLC ಮತ್ತು PUC ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಅಲೆಮಾರಿ ಹೆಳವ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾಜಿ ಕಾರ್ಮಿಕ ಸಚಿವ ಹಾಗೂ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಎಸ್.ಕೆ. ಕಾಂತಾ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದುಡಿಯುವ ವರ್ಗಕ್ಕೆ ಸಮಾಜ ನಿರ್ಮಾಣ ಮಾಡುವ ಶಕ್ತಿ ಇರುತ್ತದೆ. ನಮ್ಮ ಹಕ್ಕುಗಳನ್ನು ಪಡೆಯಲು ಸಂಘಟಿತ ಹೋರಾಟ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಶಂಕರಲಿಂಗ ಮಹಾಸ್ವಾಮಿಗಳು ಹಾಗೂ ಹೆಳವ ಸಮಾಜ ಮಠದ ಅಧ್ಯಕ್ಷ ಬಸವಭೃಂಗೇಶ್ವರ ಮಹಾಸ್ವಾಮಿಗಳು ವಹಿಸಿದ್ದರು.
ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಮಹಾಂತೇಶ ಕೌಲಗಿ ಹಾಗೂ ಕುಮಾರ ಯಾದವ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹೆಳವ ಸಮುದಾಯದ ಸರ್ಕಾರಿ ಅಧಿಕಾರಿಗಳಾದ ಮಲ್ಲಿಕಾರ್ಜುನ ಬಿ. ಹೆಳವರ, ಬಸವರಾಜ ಹೆಳವರ ಯಾಳಗಿ ಹಾಗೂ ಸಮಾಜದ ವಿಶೇಷ ಸಾಧನೆ ಮಾಡಿದ ಮಕ್ಕಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಮಹಿಳೆಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.





