ಕಲಬುರಗಿ| ಪಿಎಂ- ವಿಶ್ವಕರ್ಮ ಯೋಜನೆಯ ಅರಿವು ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕಲಬುರಗಿ: ಭಾರತ ಸರಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸಹಾಯ ಕಚೇರಿ ಹುಬ್ಬಳ್ಳಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಸಂಯುಕ್ತಾಶ್ರಯದಲ್ಲಿ ಪಿಎಂ-ವಿಶ್ವಕರ್ಮ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಚಾಲನೆ ನೀಡಿದರು.
ಮಂಗಳವಾರ ನಗರದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸಹಾಯ ಕಚೇರಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಈ ಯೋಜನೆಯನ್ನು ಪರಿಣಾಮಕಾರಕವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಮುಂಬರುವ ದಿನಗಳಲ್ಲಿ ಪಿಎಂ-ವಿಶ್ವಕರ್ಮ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡು ಜೀವನಮಾನ ಸುಧಾರಿಸಿಕೊಳ್ಳಲು ಕರೆ ನೀಡಿದರು. ತಯಾರಿಸಿದ ವಸ್ತುಗಳಿಗೆ ಉತ್ತೇಜನೆ ನೀಡಲು ವಸ್ತು ಪ್ರದರ್ಶನ ಆಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕಲಬುರಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಅಬ್ದುಲ್ ಅಜೀಮ್ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಯೋಜನೆಯ ಉದ್ದೇಶಗಳ ಬಗ್ಗೆ ವಿವರಿಸಿದರು. ಜಿಲ್ಲಾಧಿಕಾರಿಗಳು ತರಬೇತಿ ಪೂರೈಸಿದ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿದರು.







