Kalaburagi | ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಡಿಇಸಿ ಇಕ್ರಮ್ ಶರೀಫ್
ಸೆ.17ರ ಉತ್ಸವಕ್ಕೆ ಸಕಲ ಸಿದ್ಧತೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ

ಕಲಬುರಗಿ: ಸೆ.17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸೆ.17ರಂದು ಬೆಳಿಗ್ಗೆ 8.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಉತ್ಸವದ ಅಂಗವಾಗಿ ಸೆ.16ರ ಸಂಜೆ ನಗರದ ಪ್ರಮುಖ ವೃತ್ತಗಳು ಹಾಗೂ ವಿಧಾನಸೌಧದ ಸುತ್ತಮುತ್ತಲಿನ ಸರ್ಕಾರಿ ಕಚೇರಿಗಳಿಗೆ ಆಕರ್ಷಕ ದೀಪಾಲಂಕಾರ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಸೌಂದರ್ಯೀಕರಣ ಹಾಗೂ ಉತ್ಸವದ ವಾತಾವರಣ ನಿರ್ಮಾಣಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದರು.
ಮುಖ್ಯಮಂತ್ರಿಗಳಿಂದ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಗಳು ಫಲಾನುಭವಿಗಳ ಪಟ್ಟಿಯನ್ನು ಮುಂಚಿತವಾಗಿಯೇ ಸಲ್ಲಿಸಬೇಕು. ಕೊನೆಯ ಕ್ಷಣದಲ್ಲಿ ಸಲ್ಲಿಸುವ ಪಟ್ಟಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ, ಪೊಲೀಸ್ ಬಂದೋಬಸ್ತ್, ನಿರಂತರ ವಿದ್ಯುತ್ ಪೂರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಮಗಾರಿಗಳನ್ನು ಸೆಪ್ಟೆಂಬರ್ 15ರ ಸಂಜೆಯೊಳಗೆ ಪೂರ್ಣಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರಮುಖ ರಸ್ತೆ, ವೃತ್ತಗಳು ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ಮುಖ್ಯಮಂತ್ರಿಗಳ ಪ್ರವಾಸದ ಹಿನ್ನೆಲೆಯಲ್ಲಿ ಸೆ.17ರಂದು ಬೆಳಿಗ್ಗೆ 7.30ರೊಳಗೆ ಎಲ್ಲ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಬೆಳಿಗ್ಗೆ 8 ಗಂಟೆಗೆ ಡಿ.ಎ.ಆರ್. ಮೈದಾನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಯಾವುದೇ ಅಧಿಕಾರಿ ಪೂರ್ವಾನುಮತಿಯಿಲ್ಲದೆ ಕೇಂದ್ರ ಸ್ಥಾನ ತೊರೆಯಬಾರದು ಎಂದು ಎಚ್ಚರಿಕೆ ನೀಡಿದರು.
ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಬಹುದಿನಗಳಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಬೇಕು. ಮುಖ್ಯಮಂತ್ರಿಗಳ ಪ್ರವಾಸದ ವೇಳೆ ಸಾರ್ವಜನಿಕರು ಸಲ್ಲಿಸುವ ಮನವಿಗಳಿಗೆ ಸ್ಪಷ್ಟ ಹಾಗೂ ಸಮರ್ಪಕ ಉತ್ತರ ನೀಡಲು ಅಧಿಕಾರಿಗಳು ಸಿದ್ಧರಾಗಿರಬೇಕು ಎಂದು ತಿಳಿಸಿದರು.
ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಂದ ವಿದ್ಯಾರ್ಥಿಗಳನ್ನು ಕರೆತರಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಲಾಯಿತು.
ಉತ್ಸವದ ವಿಶೇಷ ಆಕರ್ಷಣೆಯಾಗಿ ಕೆಎಸ್‌ಆರ್‌ಟಿಸಿ, ಜೆಸ್ಕಾಂ, ಶಿಕ್ಷಣ, ಕೃಷಿ, ತೋಟಗಾರಿಕೆ ಹಾಗೂ ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ಕಲ್ಯಾಣ ಪಥ ಮತ್ತು ನೈಪುಣ್ಯ ವಿಕಾಸವನ್ನು ಬಿಂಬಿಸುವ ಏಳು ಆಕರ್ಷಕ ಸ್ತಬ್ಧಚಿತ್ರಗಳನ್ನು (ಟ್ಯಾಬ್ಲೋ) ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಪ್ರತಿಯೊಂದು ಸ್ತಬ್ಧಚಿತ್ರದ ವಿಷಯ ಹಾಗೂ ಅದರ ವಿವರಣೆಯನ್ನು ಒಳಗೊಂಡ ಟಿಪ್ಪಣಿಯನ್ನು ಮುಂಚಿತವಾಗಿ ಸಲ್ಲಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ರಿತಿಕಾ ವರ್ಮಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






