Kalaburagi | ಯುವಜನತೆ ಅತ್ಯಮೂಲ್ಯ ಸಂಪತ್ತು: ಡಾ.ಮುಸ್ತಫಾ ಅಲ್ ಹುಸ್ಸೇನಿ

ಕಲಬುರಗಿ: ಯುವಜನತೆ ರಾಷ್ಟ್ರದ ಶಕ್ತಿ ಹಾಗೂ ಅತ್ಯಮೂಲ್ಯ ಸಂಪನ್ಮೂಲವಾಗಿದ್ದು, ಯುವಕರು ಜ್ಞಾನ, ಚಾರಿತ್ರ್ಯ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದರ ಜೊತೆಗೆ ಹೃದಯದಲ್ಲಿ ಪ್ರೀತಿ ಹಾಗೂ ಸೌಹಾರ್ದತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕೆಬಿಎನ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ದೇಶಕ ಡಾ.ಮುಸ್ತಫಾ ಅಲ್ ಹುಸ್ಸೇನಿ ಹೇಳಿದರು.
ನಗರದ ಖ್ವಾಜಾ ಬಂದೇನವಾಝ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಅನೇಕ ದೇಶಪ್ರೇಮಿಗಳು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅವರ ತ್ಯಾಗ, ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ದೇಶದ ಅಭಿವೃದ್ಧಿಗಾಗಿ ಅನೇಕರು ಶ್ರಮಿಸುತ್ತಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೌಲ್ಯವನ್ನು ಅರಿತು ಸಮಾಜ ಹಾಗೂ ರಾಷ್ಟ್ರದ ಜವಾಬ್ದಾರಿಯನ್ನು ಗೌರವಿಸಬೇಕು ಎಂದರು.
ಎಲ್ಲ ಧರ್ಮಗಳನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ದ್ವೇಷದಿಂದ ಯಾವುದೇ ಸಾಧನೆ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಪರಸ್ಪರ ಪ್ರೀತಿ, ಸಹೋದರತೆ ಹಾಗೂ ಏಕತೆಯಿಂದ ಬದುಕಬೇಕು ಎಂದು ಕರೆ ನೀಡಿದರು.
ವಿಶ್ವವಿದ್ಯಾಲಯದ ಸಹ ಉಪಕುಲಪತಿ ಮಾತನಾಡಿ, ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು. ಕೆಬಿಎನ್ ವಿಶ್ವವಿದ್ಯಾಲಯ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲಿದೆ. ಸಂಶೋಧನಾ ಕ್ಷೇತ್ರಕ್ಕೆ ವಿಶ್ವವಿದ್ಯಾಲಯ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡುತ್ತಿದೆ ಎಂದು ತಿಳಿಸಿದರು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ :
ಭಾರತದ ರಾಷ್ಟ್ರಭಕ್ತಿ ಗೀತೆಯಾದ ‘ವಂದೇ ಮಾತರಂ’ ರಚನೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷವಾಗಿ ‘ವಂದೇ ಮಾತರಂ’ ಗೀತೆಯನ್ನು ಪ್ರಸ್ತುತಪಡಿಸಲಾಯಿತು.
ವಿಶ್ವವಿದ್ಯಾಲಯದ ಕಾರ್ಯಚಟುವಟಿಕೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಕ್ಬರ್ ಪಟೇಲ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.
ಅಕ್ಬರ್ ಹುಸ್ಸೇನಿ ಶಾಲೆಯ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕನ್ನಡ, ಉರ್ದು ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಭಾಷಣ ಮಾಡಿದರು. ದೇಶಭಕ್ತಿ ಗೀತೆಗಳ ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವಿಶ್ವವಿದ್ಯಾಲಯದ ಕುಲಸಚಿವ ಮಿರ್ ವಿಲಾಯತ್ ಅಲಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಡಾ. ಗೀತಾಂಜಲಿ ಕಾಂಬಳೆ ವಂದಿಸಿದರು. ವಿದ್ಯಾರ್ಥಿನಿಯರಾದ ನಿದಾ ಹಾಗೂ ಷಾಝಿಯಾ ಕಾರ್ಯಕ್ರಮ ನಿರ್ವಹಿಸಿದರು. ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






