ಕಾಳಗಿ | ಮುಂಗಾರು ಮಳೆ ಕೊರತೆ : ರೈತರ ನೆರವಿಗೆ ಧಾವಿಸಲು ಸರ್ಕಾರಕ್ಕೆ ರೇವಣಸಿದ್ಧ ಆಗ್ರಹ

ಕಾಳಗಿ: ಮುಂಗಾರು ಮಳೆಯ ತೀವ್ರ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ಹದಗೆಟ್ಟಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಅನ್ನದಾತರ ನೆರವಿಗೆ ಮುಂದಾಗಬೇಕು ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರೇವಣಸಿದ್ಧ ಬಡಾ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ತಿಳಿಸಿರುವ ಅವರು, ಮಳೆಯ ಕೊರತೆಯಿಂದ ಕೃಷಿ ಭೂಮಿ ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬ್ಯಾಂಕ್ ಸಾಲದ ಸುಳಿಗೆ ಸಿಲುಕಿರುವ ರೈತರಿಗೆ ಸರ್ಕಾರ ಧೈರ್ಯ ತುಂಬಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಹಾಗೂ ಕೃಷಿ ಸಚಿವರು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಕೃಷಿ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಮುಂದಿನ ದಿನಗಳಲ್ಲಿ ಸುರಿಯುವ ಮಳೆಯನ್ನು ಅವಲಂಬಿಸಿ ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ಶೇ.100 ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಿತ್ತನೆ ಒಣಗಿದ ಅಥವಾ ಬಿತ್ತನೆ ಮಾಡಲಾಗದ ಜಮೀನುಗಳಿಗೆ ಹೆಕ್ಟೇರ್ ಆಧಾರದ ಮೇಲೆ ಸೂಕ್ತ ಆರ್ಥಿಕ ಪರಿಹಾರ ಘೋಷಿಸಬೇಕು. ಮಳೆ ಕೊರತೆಯಿಂದ ಬೆಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಸಾಲ ತೀರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೀಗಾಗಿ ರಾಷ್ಟ್ರೀಕೃತ, ವಾಣಿಜ್ಯ ಹಾಗೂ ಸಹಕಾರ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಕೃಷಿ ಸಾಲಗಳನ್ನು ಸರ್ಕಾರ ತಕ್ಷಣ ಮನ್ನಾ ಮಾಡಿ ರೈತರ ನೆರವಿಗೆ ಬರಬೇಕು ಎಂದು ರೇವಣಸಿದ್ಧ ಬಡಾ ಒತ್ತಾಯಿಸಿದ್ದಾರೆ.






