ನ.15ರಂದು ಕಲಬುರಗಿಯಲ್ಲಿ ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ: 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ವತಿಯಿಂದ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 ಹುದ್ದೆಗಳ ಭರ್ತಿಗಾಗಿ ನವೆಂಬರ್ 15ರಂದು ಭಾನುವಾರ ಕಲಬುರಗಿ ನಗರದ 29 ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆಯನ್ನು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಮತ್ತು ನಕಲು ತಡೆಯುವ ಉದ್ದೇಶದಿಂದ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ಸಂಬಂಧ ಕಲಬುರಗಿ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) 2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 35(ಸಿ)ರ ಅನ್ವಯ, ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರರು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲೂಟೂತ್, ವೈರ್ಲೆಸ್ ಸೆಟ್ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.
ಇದಲ್ಲದೆ, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲ ಜೆರಾಕ್ಸ್ ಕೇಂದ್ರಗಳು, ಸೈಬರ್ ಕೆಫೆಗಳು ಹಾಗೂ ಪುಸ್ತಕ ಅಂಗಡಿಗಳನ್ನು ಮುಚ್ಚುವಂತೆಯೂ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿದ್ದಾರೆ.






