ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡನೀಯ: ಅಮಿತ್ ಶಾ ರಾಜೀನಾಮೆಗೆ ದಸಂಸ ಆಗ್ರಹ

ಕಲಬುರಗಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ಹಾಗೂ ಖಂಡನೀಯ ಕೃತ್ಯವಾಗಿದೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದಿ) ರಾಜ್ಯ ಸಂಚಾಲಕ ಎಸ್.ಆರ್. ಕೊಲ್ಲೂರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವೇದನಾಶೀಲತೆಯನ್ನು ಕಳೆದುಕೊಂಡಿದ್ದು, ವಿದ್ಯಾರ್ಥಿಗಳ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಅದಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದ ಅವರು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ವರ್ತಿಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನೀಟ್ ಪರೀಕ್ಷೆ ಆರಂಭವಾದಾಗಿನಿಂದಲೂ ಪ್ರತಿ ವರ್ಷ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಮರುಕಳಿಸುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೆ ಸಿಲುಕುತ್ತಿದೆ. ಈ ಬೆಳವಣಿಗೆಯಿಂದ ಅನೇಕ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದು, ಕೆಲವರು ಆತ್ಮಹತ್ಯೆಯಂತಹ ದುರ್ಘಟಿತ ನಿರ್ಧಾರಗಳನ್ನು ಕೈಗೊಳ್ಳುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಪ್ರಸಕ್ತ ವರ್ಷ ದೇಶಾದ್ಯಂತ ಸುಮಾರು 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಶಿಕ್ಷಣ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ ಎಂದು ಹೇಳಿದರು.
ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ನಡೆಸುವಲ್ಲಿ ಕೇಂದ್ರ ಸರಕಾರ ಪದೇಪದೇ ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಸರಕಾರಗಳಿಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು. ಕೇಂದ್ರ ಸರಕಾರ ತರುವ ಮಸೂದೆಗಳು ಶಾಶ್ವತ ಪರಿಹಾರ ನೀಡುವ ಬದಲು ತಾತ್ಕಾಲಿಕ ತೇಪೆ ಹಚ್ಚುವ ಕೆಲಸವಾಗುತ್ತಿವೆ ಎಂದು ಆರೋಪಿಸಿದರು.
ನೀಟ್ ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ಪರಿಹಾರ ಘೋಷಿಸಬೇಕು. ಅಲ್ಲದೆ, ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಲ್ಲ ಕ್ರಿಮಿನಲ್ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
2024ರಲ್ಲಿ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 18 ಮಂದಿಯನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ಇದುವರೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಕೇಂದ್ರ ಸರಕಾರ ದೇಶದ ಜನತೆಗೆ ಬಹಿರಂಗಪಡಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಪಾಂಡುರಂಗ ಮದನಕರ್ ಉಪಸ್ಥಿತರಿದ್ದರು.






