65 ದಿನಗಳ ಧರಣಿಗೆ ಸ್ಪಂದಿಸದ ಆಡಳಿತ : ರೈತ-ಕಾರ್ಮಿಕರ ಬೇಡಿಕೆಗಳಿಗೆ ಆಗ್ರಹಿಸಿ ಜೂ.25ರಂದು ಆಳಂದದಲ್ಲಿ ಬೃಹತ್ ಪ್ರತಿಭಟನೆ

ಆಳಂದ: ತಾಲೂಕಿನ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು, ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಪೂರೈಕೆ ಮುಂದುವರಿಸುವುದು ಹಾಗೂ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂ.25ರಂದು ತಾಲೂಕು ಆಡಳಿತ ಸೌಧ (ತಹಸೀಲ್ದಾರ್ ಕಚೇರಿ) ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಕಿಸಾನಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ ತಿಳಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಮತ್ತು ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಈಗಾಗಲೇ 65 ದಿನಗಳ ಕಾಲ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗಿದೆ. ಹಲವು ಬಾರಿ ಶಾಸಕರು ಹಾಗೂ ಅಧಿಕಾರಿಗಳ ಗಮನ ಸೆಳೆದರೂ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದ ಕಾರಣ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ತಲಾ 30 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತಿದೆಯಾದರೂ, ಆ ಹಣದಲ್ಲಿ ಯಾವ ಕಾಮಗಾರಿಗಳು ನಡೆದಿವೆ ಎಂಬುದರ ಸ್ಪಷ್ಟ ಮಾಹಿತಿ ಇಲ್ಲ. ಅಧಿಕಾರಿಗಳು ಕೇವಲ 13 ಗ್ರಾಮಗಳಲ್ಲಿ ಮಾತ್ರ ನೀರಿನ ಸಮಸ್ಯೆ ಇದೆ ಎಂದು ಹೇಳುತ್ತಿದ್ದರೆ, ವಾಸ್ತವವಾಗಿ ಬಹುತೇಕ ಎಲ್ಲಾ ಗ್ರಾಮಗಳಲ್ಲೂ ಕುಡಿಯುವ ನೀರಿನ ತೀವ್ರ ಸಮಸ್ಯೆ ಇದೆ ಎಂದು ಆರೋಪಿಸಿದರು.
ಭೀಮಾ ಹಿನ್ನೀರಿನಿಂದ ಅಮರ್ಜಾ ಅಣೆಕಟ್ಟೆಗೆ ನೀರು ತರುವ ಯೋಜನೆ ಅವೈಜ್ಞಾನಿಕವಾಗಿದ್ದು, ಸುಮಾರು 600 ಕೋಟಿ ರೂ. ವೆಚ್ಚದ ಈ ಯೋಜನೆ ನಿರೀಕ್ಷಿತ ಫಲಿತಾಂಶ ನೀಡಿಲ್ಲ ಎಂದು ಟೀಕಿಸಿದರು.
ನೀರಿನ ಸಮಸ್ಯೆ ಕುರಿತು ಮಾಜಿ ಶಾಸಕ ಸುಭಾಷ ಗುತ್ತೇದಾರ ಅವರ ಹೇಳಿಕೆಗಳು ವಾಸ್ತವದಿಂದ ದೂರವಾಗಿವೆ ಎಂದು ಆರೋಪಿಸಿದ ಅವರು, ಹಾಲಿ ಶಾಸಕ ಬಿ.ಆರ್. ಪಾಟೀಲ ಅವರು ಅಭಿವೃದ್ಧಿ ಕುರಿತು ಉತ್ತಮ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದರೂ ಅವುಗಳ ಅನುಷ್ಠಾನದ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ಸಿರಪೂರ ಮಾದರಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಅನುಮಾನಗಳಿದ್ದು, ಈ ಯೋಜನೆಗೆ ಸಲಹೆ ನೀಡಿದವರ ವಿವರ ಬಹಿರಂಗವಾಗಬೇಕು. ಅಂತರ್ಜಲ ಅಭಿವೃದ್ಧಿ ಹಾಗೂ ಮಳೆನೀರು ಸಂರಕ್ಷಣೆಗೆ ಶಾಶ್ವತ ಯೋಜನೆಗಳನ್ನು ಜಾರಿಗೊಳಿಸದಿದ್ದರೆ ತಾಲೂಕು ಗಂಭೀರ ಜಲಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಿದ್ಯುತ್ ಕ್ಷೇತ್ರದ ಖಾಸಗೀಕರಣವನ್ನು ಕೈಬಿಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಹೆಸರಿನಲ್ಲಿ ಹೆಚ್ಚುವರಿ ಆರ್ಥಿಕ ಹೊರೆ ಹಾಕಬಾರದು ಎಂದು ಒತ್ತಾಯಿಸಿದರು.
ಭಾರತೀಯ ಖೇತ ಮಜದೂರ ಯುನಿಯನ್ ಹಾಗೂ ಅಖಿಲ ಭಾರತ ಕಿಸಾನಸಭಾ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಿಸಾನಸಭಾ ತಾಲೂಕು ಅಧ್ಯಕ್ಷ ಧರ್ಮಣ್ಣಾ ಪೂಜಾರಿ, ಗೌರವ ಅಧ್ಯಕ್ಷ ಚಂದ್ರಕಾಂತ ಖೋಬ್ರೆ ಹಾಗೂ ಭಾರತೀಯ ಖೇತ ಮಜದೂರ ಯುನಿಯನ್ ಕಾರ್ಯದರ್ಶಿ ರಮೇಶ್ ಹತ್ತಿಕಾಳೆ ಉಪಸ್ಥಿತರಿದ್ದರು.






