ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 8 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲರಿಂದ ಭೂಮಿ ಪೂಜೆ

ಸೇಡಂ : ಸೇಡಂ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೇಡಂ ಆವರಣದಲ್ಲಿ ಅಂದಾಜು 8 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಸಚಿವರು, ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನೂತನ ಗ್ರಂಥಾಲಯ ಕಟ್ಟಡ ನಿರ್ಮಾಣ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುದಾನದಡಿ ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ಸೆಮಿನಾರ್ ಹಾಲ್ ಮತ್ತು ಪ್ರಯೋಗಾಲಯಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
“ಕಳೆದ ಮೂರು ವರ್ಷಗಳಲ್ಲಿ ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿಗೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದೆಯೂ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು,” ಎಂದು ಅವರು ಭರವಸೆ ನೀಡಿದರು.
ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ಪ್ರತ್ಯೇಕ ತರಬೇತಿ ಕೋಣೆಗಳ ನಿರ್ಮಾಣಕ್ಕಾಗಿ ಉನ್ನತ ಶಿಕ್ಷಣ ಸಚಿವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ಸಚಿವರು ತಿಳಿಸಿದರು. ಮುಂದಿನ ದಿನಗಳಲ್ಲಿ ₹5 ಕೋಟಿಗೂ ಹೆಚ್ಚು ವೆಚ್ಚದ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದರು.
ಸರ್ಕಾರಿ ಕಾಲೇಜುಗಳಲ್ಲಿ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದರ ಜೊತೆಗೆ ಬೋಧನೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಮಹತ್ವ ನೀಡಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಭಿವೃದ್ಧಿ ಮಂಡಳಿ ಸದಸ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.






