ನೆಹರೂ ಮಾಡಿದಷ್ಟು ಕೆಲಸ ಮೋದಿ ಅವರು ಮಾಡಿಲ್ಲ : ಸಚಿವ ರಾಮಲಿಂಗಾರೆಡ್ಡಿ

ಕಲಬುರಗಿ : ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರ ಬಗ್ಗೆ ಸದಾ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು, ನೆಹರೂ ಮಾಡಿದ ಒಂದು ರೂಪಾಯಿ ಕೆಲಸದಲ್ಲಿ 10 ಪೈಸೆಯಾದರೂ ಮಾಡಿಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆಹರೂ ನಿಧನವಾಗಿ ಹಲವು ವರ್ಷಗಳಾಗಿದ್ದರೂ ಮೋದಿ ಪ್ರತಿಯೊಂದು ವಿಚಾರದಲ್ಲೂ ನೆಹರೂ ಹೆಸರನ್ನು ಪ್ರಸ್ತಾಪಿಸುತ್ತಾರೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನೆಹರೂ ಸುಮಾರು 10 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು. ಆದರೆ ಬಿಜೆಪಿ ಹಾಗೂ ಅವರ ಪೂರ್ವಜರು ಜೈಲು ಶಿಕ್ಷೆ ಅನುಭವಿಸಿಲ್ಲ, ಸ್ವಾತಂತ್ರ್ಯ ಚಳುವಳಿಯಲ್ಲೂ ಭಾಗವಹಿಸಿಲ್ಲ ಎಂದು ಆರೋಪಿಸಿದರು.
ಎಪ್ಸ್ಟೀನ್ ಫೈಲ್‌ನಲ್ಲಿ ಮೋದಿ ಹೆಸರು ಇರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಬಹಿರಂಗಪಡಿಸಿದ್ದಾರೆ. ತಾವು ವಿಶ್ವಗುರು ಎಂದು ಕೊಂಡಾಡುತ್ತಿದ್ದ ಮೋದಿ ಕುರಿತು ಸತ್ಯಾಂಶ ಈಗ ಜಗತ್ತಿಗೆ ಗೊತ್ತಾಗಿದೆ. ನಿಜ ವಿಷಯವನ್ನು ಸಹಿಸದೇ ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಗಿದೆ ಎಂದು ದೂರಿದರು.
ಗಾಣಗಾಪುರ ಸಮಗ್ರ ಅಭಿವೃದ್ಧಿಗೆ ಬದ್ಧತೆ :
ಸುಕ್ಷೇತ್ರ ಗಾಣಗಾಪುರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದು ಸಚಿವರು ತಿಳಿಸಿದರು.
ಈ ಕುರಿತು ಈಗಾಗಲೇ ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಅನುದಾನ ಬಿಡುಗಡೆಗೆ ಸರ್ಕಾರ ಬದ್ಧವಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಎಂ.ವೈ. ಪಾಟೀಲ್, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






