ಕಲಬುರಗಿಯಲ್ಲಿ ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

ಕಲಬುರಗಿ: ದೇಶದ ಮೂರನೇ ಪ್ರಧಾನಮಂತ್ರಿ ದಿವಂಗತ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಗುರುವಾರ ನಗರದ ಸೂಪರ್ ಮಾರ್ಕೆಟ್ ನಗರ ಬಸ್ ನಿಲ್ದಾಣದ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ನಿರ್ಮಿಸಿರುವ 16 ನೂತನ ಇಂದಿರಾ ಕ್ಯಾಂಟೀನ್‌ಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಏಕಕಾಲದಲ್ಲಿ ಉದ್ಘಾಟಿಸಿದರು.
ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಹಾನಗರ ಪಾಲಿಕೆ ಉಪ ಮಹಾಪೌರರಾದ ಫರ್ಹಾನಾಜ ಖುಸ್ತೂ ಜಾಗೀರದಾರ ಅವರು ಕ್ಯಾಂಟೀನ್‌ಗೆ ಅಧಿಕೃತವಾಗಿ ಚಾಲನೆ ನೀಡಿದರು.
ಉದ್ಘಾಟನೆಯ ಬಳಿಕ ಅವರು ಸಾರ್ವಜನಿಕರೊಂದಿಗೆ ಕ್ಯಾಂಟೀನ್‌ನಲ್ಲಿ ಕುಳಿತು ಊಟ ಮಾಡಿದರು. ಈ ಮೂಲಕ ಆಹಾರದ ರುಚಿ, ಗುಣಮಟ್ಟ ಹಾಗೂ ಸ್ವಚ್ಛತೆಯನ್ನು ಖುದ್ದಾಗಿ ಪರಿಶೀಲಿಸಿದರು.
ಸಮಾರಂಭದಲ್ಲಿ ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ರೇಣುಕಾ ಪರಶುರಾಮ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ಮಹಾನಗರ ಪಾಲಿಕೆ ಆಯುಕ್ತ ಪಿ. ಶ್ರವಣಕುಮಾರ, ಡಿ.ಯು.ಡಿ.ಸಿ. ಯೋಜನಾ ನಿರ್ದೇಶಕ ಮುನಾವರ್ ದೌಲಾ ಹಾಗೂ ಮಹಾನಗರ ಪಾಲಿಕೆ ಸದಸ್ಯೆ ನಿಂಗಮ್ಮ ಕಟ್ಟಿಮನಿ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.






