ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ | ಶಾಂತಿಯುತ ಮತದಾನಕ್ಕೆ ಸಿದ್ಧತೆ ಕೈಗೊಳ್ಳಿ : ಶಿವಕುಮಾರ ಕೆ.ಬಿ.

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನ ಆಯ್ಕೆಗೆ ಅ.23ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಕ್ಷೇತ್ರದಾದ್ಯಂತ ಶಾಂತಿಯುತ ಹಾಗೂ ಮುಕ್ತ ಚುನಾವಣೆಗೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಕ್ಷೇತ್ರದ ಡಿ.ಸಿ., ಎಸ್.ಪಿ.ಗಳಿಗೆ ಚುನಾವಣಾ ವೀಕ್ಷಕ ಶಿವಕುಮಾರ ಕೆ.ಬಿ. ಸೂಚನೆ ನೀಡಿದರು.
ಬುಧವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕ್ಷೇತ್ರದ ವ್ಯಾಪ್ತಿಯ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರರೊಂದಿಗೆ ಸಭೆ ನಡೆಸಿದ ಅವರು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಭಯ, ಆತಂಕವಿಲ್ಲದೆ ಶಾಂತಿಯುತವಾಗಿ ಮತದಾನ ನಡೆಯಲು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಈಗಾಗಲೇ ಡಿ.30, 2025ರಂದು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಇದಾದ ಬಳಿಕ ಸೆ.29ರವರೆಗೆ ಸ್ವೀಕೃತವಾದ ನಮೂನೆ-19ರ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಿ ದೋಷಮುಕ್ತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಸೂಚಿಸಿದರು.
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರರು ಕಡ್ಡಾಯವಾಗಿ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಕನಿಷ್ಠ ಮೂಲಭೂತ ಸೌಕರ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಮತದಾನ ದಿನದಂದು ಮತಗಟ್ಟೆಗಳಿಗೆ ಅಗತ್ಯವಿರುವ ನಮೂನೆಗಳು, ಲಕೋಟೆಗಳು ಹಾಗೂ ಸ್ಟೇಷನರಿ ಸಾಮಗ್ರಿಗಳನ್ನು ಮಸ್ಟರಿಂಗ್ ದಿನದಂದು ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿತರಿಸಬೇಕು ಎಂದು ಚುನಾವಣಾ ವೀಕ್ಷಕರು ತಿಳಿಸಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಕ್ಷೇತ್ರದ ಪ್ರತಿ ಮತಗಟ್ಟೆಯ ಮೇಲೆ ನಿಗಾ ಇರಿಸಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ಮೈಕ್ರೋ ವೀಕ್ಷಕರು ಹಾಗೂ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗೆ ಅ.12 ಮತ್ತು 17ರಂದು ಎರಡು ಹಂತಗಳಲ್ಲಿ ತರಬೇತಿ ನೀಡಬೇಕು ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.
ಮತದಾನ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 135(ಸಿ) ಪ್ರಕಾರ, ಚುನಾವಣೆಯ ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚಿತವಾಗಿ ಮತದಾನ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 21ರ ಸಂಜೆ 4 ಗಂಟೆಯಿಂದಲೇ ಜಾರಿಗೆ ಬರುವಂತೆ ಎಲ್ಲ ಜಿಲ್ಲೆಗಳಲ್ಲಿ ‘ಶುಷ್ಕ ದಿನ’ (ಡ್ರೈ ಡೇ) ಘೋಷಿಸಿ ಆದೇಶ ಹೊರಡಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್, ಸಹಾಯಕ ಚುನಾವಣಾಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ಕಲಬುರಗಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬೇನ್ ಮೊಹಪಾತ್ರ, ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತರು (ಅಭಿವೃದ್ಧಿ) ಹಾಗೂ ಪ್ರಭಾರಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಪ್ರಮೀಳಾ ಎಂ.ಕೆ., ಕಲಬುರಗಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಉಪಸ್ಥಿತರಿದ್ದರು. ಉಳಿದಂತೆ ಕ್ಷೇತ್ರದ ವ್ಯಾಪ್ತಿಯ ಏಳು ಜಿಲ್ಲೆಗಳ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.






