ಪೆಲೆಟ್ ಗನ್ ದಾಳಿ | ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ದಿಲ್ಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಪೆಲೆಟ್ ಗನ್ ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಲೆಟ್ ಗನ್ ದಾಳಿಯಿಂದ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೆಲೆಟ್ ಗನ್ ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಹಾಗೂ ಯಾರ ವಿರುದ್ಧವೂ ಎಫ್‌ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿದರು.
“ಗಾಯಗೊಂಡ ವಿದ್ಯಾರ್ಥಿ ಅಲ್ಲಿಯೇ ಇದ್ದಾರೆ. ಅವರ ನ್ಯಾಯಕ್ಕಾಗಿ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳುವುದಾಗಿ ಹೇಳಿದ ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪರವಾಗಿ ನಾವು ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗಿದೆ” ಎಂದು ಖರ್ಗೆ ಹೇಳಿದರು.
‘ವಂದೇ ಮಾತರಂ’ ಕುರಿತು ಮತ್ತೆ ಗೊಂದಲ ಬೇಡ:
‘ವಂದೇ ಮಾತರಂ’ನ ಎರಡು ಚರಣಗಳನ್ನು ಹಾಡುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ಈ ಕುರಿತು ತಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. “ಮತ್ತೆ ಮತ್ತೆ ಕನ್‌ಫ್ಯೂಸ್ ಆಗಬೇಡಿ” ಎಂದು ಪತ್ರಕರ್ತರಿಗೆ ಉತ್ತರಿಸಿದರು.






