ಕಲಬುರಗಿ| ಮುಖ್ಯಮಂತ್ರಿ ಆಗಮನ ಹಿನ್ನೆಲೆ ಸಚಿವದ್ವಯರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ಕಲಬುರಗಿ: ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಗಾಗಿ ನಾಳೆ ಮಂಗಳವಾರ (ಸೆ 30) ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕಲಬುರಗಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಕೌಶಾಲ್ಯಭಿವೃದ್ಧಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ತಯಾರಿ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಹಮ್ಮಿಕೊಳ್ಳಲಾಯಿತು.
ಮುಖ್ಯಮಂತ್ರಿಗಳ ಜೊತೆಯಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಸಂಬಂಧಿತ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳು ಸಮೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.
ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದ ನಂತರ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಈ ಭಾಗದ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ನಾಳಿನ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ಅಂಶಗಳ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಆಗಮಿಸಲು ಸಚಿವರು ಸೂಚಿಸಿದರು.
ಪ್ರತಿ ತಾಲ್ಲೂಕಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಪ್ರವಾಹ ಪೀಡಿತ ತಾಲ್ಲೂಕಗಳ ಸಮಸ್ಯೆಗಳನ್ನು ದಾಖಲೆಗಳ ಸಮೇತ ತಕ್ಷಣವೆ ಒದಗಿಸಲು ವಿಡಿಯೋ ಕಾನ್ಫೆರೆನ್ಸ್ ಮೂಲಕ ತಿಳಿಸಲಾಯಿತು.
ಸಭೆಯಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.







