ಕಲಬುರಗಿ ಅಭಿವೃದ್ಧಿಯತ್ತ ಸಾಗುತ್ತಿದೆ : ಪ್ರಿಯಾಂಕ್ ಖರ್ಗೆ
"ಪ್ರಸಕ್ತ ಸಾಲಿನಲ್ಲಿ ಕೆಕೆಆರ್‌ಡಿಬಿಯಿಂದ ಜಿಲ್ಲೆಗೆ 956.58 ಕೋಟಿ ರೂ. ಹಂಚಿಕೆ"

ಕಲಬುರಗಿ : ರಾಜ್ಯ ಸರಕಾರದ ವಿವಿಧ ಇಲಾಖೆಗಳ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ದಾಖಲೆಯ ಪ್ರಮಾಣದಲ್ಲಿ 5,000 ಕೋಟಿಯ ಅನುದಾನದಡಿಯಲ್ಲಿ ಕಲಬುರಗಿ ಜಿಲ್ಲೆ ಸರ್ವರ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇಲ್ಲಿನ ಡಿ. ಎ.ಆರ್.ಪೊಲೀಸ್ ಪರೇಡ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಅವರು ಮಾತನಾಡಿದರು.
ಈ ಸಾಲಿನಲ್ಲಿ ಕೆಕೆ ಆರ್ ಡಿಬಿ ಮಂಡಳಿಯಿಂದ ಜಿಲ್ಲೆಗೆ 956.58 ಕೋಟಿ ರೂ. ಹಂಚಿಕೆಯಾಗಿದ್ದು, ಇದರಲ್ಲಿ 873 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕಲ್ಯಾಣ ಪಥ ಯೋಜನೆಯಡಿ ಕೆ.ಕೆ.ಆರ್.ಡಿ.ಬಿ. ಮಂಡಳಿಯು ಶೇ.33ರಷ್ಟು ಅನುದಾನ ಬಳಸಿಕೊಂಡು ಜಿಲ್ಲೆಯಲ್ಲಿ ಒಟ್ಟು 255 ಕಿ.ಮೀ. ಉದ್ಧದ 64 ರಸ್ತೆಗಳನ್ನು 226.12 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ತಾಲೂಕಿನ ನದಿಸಿನ್ನೂರ-ಹೊನ್ನಕಿರಣಗಿ ಬಳಿ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸಟೈಲ್ ಪಾರ್ಕುಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 130 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲಾಗುತ್ತಿದೆ. ಚಿತ್ತಾಪುರ ತಾಲೂಕಿನ ಕೆರೆ ತುಂಬಿಸುವ ಕಾಮಗಾರಿಯನ್ನು ರೂ.135 ಕೋಟಿ ರೂ. ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬಸವಣ್ಣ ಹಾಗೂ ಇತರೆ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ದೃಷ್ಠಿಯಿಂದ ವಚನ ಸಂಗ್ರಹಾಲಯ/ ವಚನ ಮಂಟಪವನ್ನು ಕಲಬುರಗಿಯಲ್ಲಿ ಸ್ಥಾಪಿಸುವ ಪ್ರಕ್ರಿಯೆ ಆರಂಭಗೊಂಡಿದೆ ಎಂದು ತಿಳಿಸಿದರು.
ನಿರುದ್ಯೋಗಿ ಅಭ್ಯರ್ಥಿಗಳಿಗೆ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿ ನೀಡಲು ಕಲಬುರಗಿಯಲ್ಲಿ 53.25 ಕೋಟಿ ರೂ. ವೆಚ್ಚದಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಈಗಾಗಲೆ ಗುಲಬರ್ಗಾ ವಿ.ವಿ. ಜೊತೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಕಲಬುರಗಿ ನಗರದಲ್ಲಿ ಹೊಸದಾಗಿ “ಆರೋಗ್ಯ ಭವನ” ನಿರ್ಮಾಣಕ್ಕೆ 28 ಕೋಟಿ ರೂ. ಮಂಜೂರು ಮಾಡಲಾಗಿದೆ. ನಗರದಲ್ಲಿ 2 ಸಮುದಾಯ ಆರೋಗ್ಯ ಕೇಂದ್ರ ಮತ್ತು ರಾಜಾಪುರ, ಸಂತೋಷ ಕಾಲೋನಿ ಹಾಗೂ ನಯಾಮೊಹಲ್ಲಾ ಪ್ರದೇಶದಲ್ಲಿ ಹೊಸದಾಗಿ ನಗರ ಆರೋಗ್ಯ ಕೇಂದ್ರಕ್ಕೆ ಮಂಜೂರಾತಿ ದೊರೆತಿದೆ. ಜಿಲ್ಲೆಯ ಸೇಡಂ, ಚಿತ್ತಾಪುರ ಹಾಗೂ ಜೇವರ್ಗಿ ತಾಲೂಕು ಆಸ್ಪತ್ರೆಗಳನ್ನು 100 ರಿಂದ 150 ಹಾಸಿಗೆಗೆ ಮೇಲ್ದರ್ಜೆಗೇರಿಸಲಾಗಿದೆ. ಅದೇ ರೀತಿ ಇಜೇರಿ, ಫರತಾಬಾದ, ಹೀರೆಸಾವಳಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತಿಕರಿಸಿದೆ. ಕಾಳಗಿ, ಯಡ್ರಾಮಿ ಸಮುದಾಯ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆಯಿಂದ 50 ಹಾಸಿಗೆಗೆ ಹಾಗೂ ಶಹಾಬಾದ ಸಿ.ಎಚ್.ಸಿ. ಯನ್ನು 30 ರಿಂದ 100 ಹಾಸಿಗೆಗೆ ಮೇಲ್ದರ್ಜೆಗೇರಿಸಲಾಗಿದೆ. ಕಮಲಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಾಸಿಗೆ ಮಿತಿ 6 ರಿಂದ 100ಕ್ಕೆ ಹೆಚ್ಚಿಸಲಾಗಿದೆ ಎಂದರು.
ಭಾರತದ ಸಂವಿಧಾನದ ಆಶಯಕ್ಕೆ ಬದ್ಧವಾಗಿ ನಾಡಿನ ಬಡವರು, ಶೋಷಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹೀಗೆ ಬಡವ-ಬಲ್ಲಿದ ಎನ್ನದೆ ಸರ್ವರ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇವೆ ಎಂದು ಅವರು ಹೇಳಿದರು.







