ಸೇಡಂ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹಿಸಿ ಪ್ರತಿಭಟನೆ
ರೈತರಿಗೆ ಪರಿಹಾರ, ತುರ್ತು ನೆರವು ನೀಡುವಂತೆ ಆಗ್ರಹ

ಸೇಡಂ: ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಹಾಗೂ ರೈತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಬಸ್ ನಿಲ್ದಾಣದಿಂದ ಎತ್ತಿನ ಬಂಡಿಗಳೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಸವೇಶ್ವರ ವೃತ್ತದಲ್ಲಿ ರಾಜ್ಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ರಾಜ್ಯ ಸರ್ಕಾರ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವ ಪಟ್ಟಿಯಲ್ಲಿ ಸೇಡಂ ತಾಲೂಕನ್ನು ಕೈಬಿಟ್ಟಿರುವುದು ಸರಿಯಲ್ಲ. ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಸೇಡಂ ತಾಲೂಕನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಹಲವು ಪ್ರದೇಶಗಳಲ್ಲಿ ಸಿಮೆಂಟ್ ಕಾರ್ಖಾನೆಗಳಿಂದ ಉಂಟಾಗುತ್ತಿರುವ ಧೂಳಿನಿಂದ ಕೃಷಿ ಜಮೀನುಗಳು ಹಾನಿಗೊಳಗಾಗುತ್ತಿವೆ. ಜೊತೆಗೆ ಮುಂಗಾರು ಮಳೆ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳು ಮೊಳಕೆಯೊಡೆಯದೆ ಒಣಗುತ್ತಿವೆ ಎಂದು ರೈತರು ದೂರಿದರು.
ಮಳೆಯ ಅಭಾವದಿಂದ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಜಾನುವಾರುಗಳಿಗೆ ಮೇವು ಕೊರತೆಯೂ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಸೇರಿದಂತೆ ಅಗತ್ಯ ನೆರವು ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮೌನೇಶ್ ಬೆನಕನಹಳ್ಳಿ, ಮಹಿಳಾ ಅಧ್ಯಕ್ಷೆ ಶರಣಮ್ಮ, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ, ರೈತ ಘಟಕದ ಅಧ್ಯಕ್ಷ ಅಂಜುಕುಮಾರ್, ಬಸ್ಸು ತಳವಾರ, ಮಹೇಂದ್ರಕುಮಾರ್ ಆರ್., ಅಂಬ್ರೇಶ ಪವಾರ್, ದೇವು, ಶಾದೇವಿ, ಸಂತೋಷ, ಶಿವಪ್ಪ ಜುಲ್ಪಿ, ಮಲ್ಲು ಸೇರಿದಂತೆ ಹಲವರು ಭಾಗವಹಿಸಿದ್ದರು.






