S I R ರದ್ದುಪಡಿಸುವಂತೆ ಅಫಜಲಪುರದಲ್ಲಿ ಪ್ರತಿಭಟನೆ: ಚುನಾವಣಾ ಆಯೋಗದ ಮುಖ್ಯಸ್ಥರ ರಾಜೀನಾಮೆಗೆ ಆಗ್ರಹ

ಅಫಜಲಪುರ: ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ತಾಲೂಕು ಪ್ರಗತಿಪರ ಸಂಘಟನೆ, ಜನಪರ ಸಂಘಟನೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಸ್‌ಐಆರ್ ಪ್ರಕ್ರಿಯೆಯು ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿದ್ದು, ಇದನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಅಲ್ಲದೇ ಭಾರತದ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀಮಂತ ಬಿರಾದಾರ ಅವರು ಎಸ್‌ಐಆರ್ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದ್ದು, ಮತದಾರರ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸಬಾರದು. ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಗುರು ಚಾಂದಕವಟೆ ಮಾತನಾಡಿ, ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ದುರ್ಬಲಗೊಳಿಸುವ ಯಾವುದೇ ಕ್ರಮವನ್ನು ಜನರು ಒಪ್ಪುವುದಿಲ್ಲ. ಚುನಾವಣಾ ಆಯೋಗವು ಪಾರದರ್ಶಕವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರ ವಿಶ್ವಾಸ ಉಳಿಸಿಕೊಳ್ಳಬೇಕು ಎಂದು ಹೇಳಿದರು.
ಮಹಿಳಾ ಹೋರಾಟಗಾರ್ತಿ ಶಾಂತಾ ಘಂಟೆ ಮಾತನಾಡಿ, ಬಡವರು, ಮಹಿಳೆಯರು, ಕಾರ್ಮಿಕರು ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತೊಂದರೆ ಉಂಟುಮಾಡುವಂತಹ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಪಡಿಸಬೇಕು. ಜನರ ಧ್ವನಿಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ರವಿ ಗೌರ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಯಾವುದೇ ಅರ್ಹ ಮತದಾರರ ಹಕ್ಕು ಕಸಿದುಕೊಳ್ಳಲು ಅವಕಾಶ ನೀಡಬಾರದು. ಚುನಾವಣಾ ಆಯೋಗವು ಜನರ ಅನುಮಾನಗಳಿಗೆ ಸ್ಪಷ್ಟನೆ ನೀಡಿ ನ್ಯಾಯಯುತವಾಗಿ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ದಲಿತ ಮುಖಂಡ ರಾಜು ಆರೇಕಾರ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರರ ಹಕ್ಕುಗಳಿಗೆ ರಕ್ಷಣೆ ನೀಡುವುದು ಅಗತ್ಯವಾಗಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು ಹಿಂಪಡೆದು ಜನರಲ್ಲಿ ಉಂಟಾಗಿರುವ ಗೊಂದಲವನ್ನು ನಿವಾರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಿವು ಹೋಟಕರ್, ಹಣಮಂತ ರಜಪೂತ, ಶಕ್ರೆಪ್ಪೆ ಮಣ್ಣೂರ, ಬಿಸ್ಮಿಲ್ ಖೇಡಗಿ, ಶ್ರೀದೇವಿ,ಸಂದೀಪ್ ಕಾಂಬಳೆ, ಚಂದು ಬನ್ನೆಟ್ಟಿ,ಗಂಗುಬಾಯಿ ಪದಕಿ, ಸೀಮಾ ಮೋಟಗಿ,ಕನ್ಯಾಕುಮಾರಿ, ಸಮೀನಾ ಸಂತೋಷ ದಣ್ಣೂರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.






