ಮಳೆ ಕೊರತೆ: ಆ.20ರಂದು ಕಲಬುರಗಿ ಬಂದ್‌ಗೆ ಕರೆ

ಕಲಬುರಗಿ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಲಬುರಗಿಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಹಾಗೂ ಬೆಳೆ ವಿಮೆಯಿಂದ ವಂಚಿತರಾದ ಎಲ್ಲ ಅರ್ಹ ರೈತರಿಗೆ ಕೂಡಲೇ ವಿಮೆ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಆ.20ರಂದು ಕಲಬುರಗಿ ಬಂದ್‌ಗೆ ಕರೆ ನೀಡಿದೆ.
ಶುಕ್ರವಾರ ನಗರದ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಮಿತಿಯ ಮುಖಂಡರು, ರೈತರ ಎಲ್ಲ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಆ.17ರಂದು ಬಂದ್ ನಡೆಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಬಂದ್‌ನ್ನು ಮುಂದೂಡಿ ಆ.20ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ರೈತ ಮುಖಂಡರು ತಿಳಿಸಿದರು.
ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಕೊರತೆಯಿಂದ ತೊಗರಿ, ಹೆಸರು, ಉದ್ದು, ಸೋಯಾಬೀನ್ ಹಾಗೂ ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಒಣಗುವ ಹಂತಕ್ಕೆ ತಲುಪಿವೆ. ಸಾಲ ಮಾಡಿ ಬಿತ್ತನೆ ಮಾಡಿರುವ ರೈತರು ಬೆಳೆ ನಷ್ಟದ ಆತಂಕದಲ್ಲಿದ್ದಾರೆ ಎಂದು ಅವರು ಹೇಳಿದರು.
ಪ್ರತಿ ಎಕರೆಗೆ 50 ಸಾವಿರ ರೂ. ಬರ ಪರಿಹಾರ ನೀಡಬೇಕು, ಒಣಗಿರುವ ಕಬ್ಬು ಬೆಳೆಗೆ ಪರಿಹಾರ ಒದಗಿಸಬೇಕು ಹಾಗೂ ಬಾಕಿ ಇರುವ ಬೆಳೆ ವಿಮೆ ಹಣವನ್ನು ಅರ್ಹ ರೈತರ ಖಾತೆಗಳಿಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು. ಹಿಂಗಾರು ಬಿತ್ತನೆಗೆ ಉಚಿತ ಬೀಜ ಮತ್ತು ರಸಗೊಬ್ಬರ ವಿತರಣೆ, ಕೃಷಿ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಣೆ ಹಾಗೂ ಸಾಲ ಮನ್ನಾ, ಜಾನುವಾರುಗಳಿಗೆ ಮೇವು ಮತ್ತು ಗೋಶಾಲೆಗಳ ವ್ಯವಸ್ಥೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ನೀರಿನ ಪಾಲಿನ 15 ಟಿಎಂಸಿ ನೀರನ್ನು ಬಿಡುಗಡೆ ಮಾಡಿ ಭೀಮಾ ನದಿಗೆ ಹರಿಸಬೇಕು. ಬರ ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡವನ್ನು ತಕ್ಷಣ ಜಿಲ್ಲೆಗೆ ಕಳುಹಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ಆಗಸ್ಟ್ 20ರಂದು ನಡೆಯಲಿರುವ ಕಲಬುರಗಿ ಬಂದ್‌ಗೆ ರೈತರು, ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಸಂಯುಕ್ತ ಹೋರಾಟದ ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಅರ್ಜುನ್ ಗೊಬ್ಬೂರು, ಕರೆಪ್ಪ ಕರಗೊಂಡ, ಸಿದ್ದು ಎಸ್.ಎಲ್., ಸುಧಾಕರ್ ಇಟಗಿ ಹಲವರು ಮನವಿ ಮಾಡಿದ್ದಾರೆ.






