ವಾರ್ತಾಭಾರತಿ ವರದಿ ಫಲಶ್ರುತಿ: ಕಡಕೋಳ ಶಾಲೆಗೆ ವಿದ್ಯುತ್ ಭಾಗ್ಯ

ಯಡ್ರಾಮಿ: ತಾಲೂಕಿನ ಕಡಕೋಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ ಹಾಗೂ ಕಳೆದ 19 ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದಿರುವ ಕುರಿತು ಜುಲೈ 28ರಂದು ‘ವಾರ್ತಾಭಾರತಿ’ ದಿನಪತ್ರಿಕೆಯಲ್ಲಿ ‘ಕಡಕೋಳ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಜೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಶುಕ್ರವಾರ ಶಾಲೆಗೆ ಭೇಟಿ ನೀಡಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇದರಿಂದ ಹಲವು ವರ್ಷಗಳಿಂದ ವಿದ್ಯುತ್ ಸಮಸ್ಯೆ ಎದುರಿಸುತ್ತಿದ್ದ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಸಂತಸ ಮೂಡಿದೆ.
ಶಾಲೆಯಲ್ಲಿ 19 ವರ್ಷಗಳಿಂದ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ವಿದ್ಯುತ್ ಕೊರತೆಯಿಂದ ಶಾಲೆಯಲ್ಲಿದ್ದ ಕಂಪ್ಯೂಟರ್‌ಗಳು ಸೇರಿದಂತೆ ಡಿಜಿಟಲ್ ಶಿಕ್ಷಣದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಇದೀಗ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿರುವುದರಿಂದ ಡಿಜಿಟಲ್ ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ.
ಆದರೆ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಶಿಕ್ಷಣ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
“ಕಡಕೋಳ ಸರಕಾರಿ ಪ್ರೌಢಶಾಲೆಯಲ್ಲಿ ಕಳೆದ 19 ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಶಾಲೆಯ ಸಮಸ್ಯೆ ಕುರಿತು ‘ವಾರ್ತಾಭಾರತಿ’ಯಲ್ಲಿ ಸುದ್ದಿ ಪ್ರಕಟವಾದ ಬಳಿಕ ಜೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಪಂದಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗಿರುವುದು ಸಂತಸದ ಸಂಗತಿಯಾಗಿದೆ ಎಂದು ಕಡಕೋಳ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಭೀಮರಾಯ ಅವರು ಹೇಳಿದರು.
“‘ವಾರ್ತಾಭಾರತಿ’ ದಿನಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದ ಬೆನ್ನಲ್ಲೇ ಶಾಲೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಧಿಕಾರಿಗಳು ಮುಂದಾಗಿರುವುದು ಸ್ವಾಗತಾರ್ಹ. ಇದೇ ರೀತಿಯಲ್ಲಿ ಶಾಲೆಗೆ ಅಗತ್ಯವಿರುವ ಶಿಕ್ಷಕರನ್ನೂ ಕೂಡಲೇ ನೇಮಕ ಮಾಡುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಕಲ್ಪಿಸಬೇಕು. ಶಿಕ್ಷಕರ ಕೊರತೆಯಿಂದ ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಶಿಕ್ಷಣ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಯಡ್ರಾಮಿ ತಾಲೂಕು ಘಟಕದ ಅಧ್ಯಕ್ಷ ಮಹೇಶ್ ಪಾಟೀಲ ಹೇಳಿದರು.






