ದೇಶದ ರಕ್ಷಣೆಗಾಗಿ ಹುತಾತ್ಮರಾದ ಪೊಲೀಸರ ತ್ಯಾಗ ಸದಾ ಸ್ಮರಣೀಯ: ಇಕ್ರಮ್ ಶರೀಫ್

ಕಲಬುರಗಿ: ದೇಶದ ರಕ್ಷಣೆ ಮತ್ತು ಭದ್ರತೆಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯ. ಅವರ ಸೇವೆಯನ್ನು ಗೌರವಿಸಿ, ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹೇಳಿದರು.
ನಗರದ ಡಿ.ಎ.ಆರ್. ಮೈದಾನದಲ್ಲಿ ಬುಧವಾರ ಕಲಬುರಗಿ ನಗರ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆಯ ಕರ್ತವ್ಯ ಇತರ ಇಲಾಖೆಗಳಿಗಿಂತ ಭಿನ್ನ ಹಾಗೂ ಸವಾಲಿನಿಂದ ಕೂಡಿದೆ. ದಸರಾ, ದೀಪಾವಳಿ, ಈದ್, ಕ್ರಿಸ್‌ಮಸ್ ಸೇರಿದಂತೆ ಯಾವುದೇ ಹಬ್ಬವಿರಲಿ, ಸಾರ್ವಜನಿಕರು ಸಂಭ್ರಮದಿಂದ ಹಬ್ಬ ಆಚರಿಸುವ ಸಂದರ್ಭದಲ್ಲಿ ಪೊಲೀಸರು ಭದ್ರತಾ ಕರ್ತವ್ಯದಲ್ಲಿ ನಿರತರಾಗಿರುತ್ತಾರೆ. ವರ್ಷವಿಡೀ 365 ದಿನಗಳು, ವಾರದ ಏಳು ದಿನಗಳು ಹಾಗೂ ದಿನದ 24 ಗಂಟೆಗಳ ಕಾಲ ಜನರ ರಕ್ಷಣೆಗಾಗಿ ಶ್ರಮಿಸುತ್ತಾರೆ ಎಂದು ತಿಳಿಸಿದರು.
ಲಕ್ಷಾಂತರ ಜನರು ಸೇರುವ ಹಬ್ಬ, ಜಾತ್ರೆ, ಮೆರವಣಿಗೆ ಹಾಗೂ ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿ, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಪ್ರಮುಖ ಜವಾಬ್ದಾರಿಯಾಗಿದೆ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕೆಲವೊಮ್ಮೆ ಟೀಕೆಗಳನ್ನು ಎದುರಿಸಬೇಕಾದ ಪರಿಸ್ಥಿತಿಯೂ ಎದುರಾಗುತ್ತದೆ. ಹೀಗಾಗಿ ಪೊಲೀಸ್ ಸೇವೆಯನ್ನು ಕೆಲವರು ಕೃತಜ್ಞತೆ ದೊರೆಯದ ಸೇವೆ ಎಂದೂ ಪರಿಗಣಿಸುತ್ತಾರೆ ಎಂದು ಹೇಳಿದರು.
ಪೊಲೀಸರ ತ್ಯಾಗ ಕೇವಲ ಅವರಿಗಷ್ಟೇ ಸೀಮಿತವಾಗಿಲ್ಲ. ಅವರ ಪತ್ನಿ, ಮಕ್ಕಳು, ತಂದೆ-ತಾಯಿ ಸೇರಿದಂತೆ ಕುಟುಂಬದ ಸದಸ್ಯರೂ ಹಬ್ಬ-ಹರಿದಿನಗಳಲ್ಲಿ ಒಟ್ಟಾಗಿ ಸಮಯ ಕಳೆಯಲು ಸಾಧ್ಯವಾಗದೆ ತ್ಯಾಗ ಮಾಡುತ್ತಾರೆ. ಪೊಲೀಸರು ಹಾಗೂ ಅವರ ಕುಟುಂಬದವರ ನಿರಂತರ ಸೇವೆ, ಸಹಕಾರ ಮತ್ತು ತ್ಯಾಗದಿಂದಲೇ ಸಮಾಜದ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅಭಿಪ್ರಾಯಪಟ್ಟರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಪೊಲೀಸ್ ಸಿಬ್ಬಂದಿಯ ತ್ಯಾಗವನ್ನು ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್ 21ರಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ ಎಂದರು.
1959ರಲ್ಲಿ ದೇಶದ ಉತ್ತರ ಗಡಿಯ ಲಡಾಖ್‌ನಲ್ಲಿ ತಮ್ಮ ಸಂಖ್ಯೆಗಿಂತ ಹಲವು ಪಟ್ಟು ಹೆಚ್ಚಿದ್ದ ಹಾಗೂ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಚೀನಾ ಸೈನಿಕರನ್ನು ಧೈರ್ಯದಿಂದ ಎದುರಿಸಿ ಹೋರಾಡಿ ಪ್ರಾಣಾರ್ಪಣೆ ಮಾಡಿದ 10 ಮಂದಿ ಭಾರತೀಯ ಪೊಲೀಸ್ ಸಿಬ್ಬಂದಿಯ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.
ದೇಶದ ಭದ್ರತೆ ಮತ್ತು ರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ 154 ಹುತಾತ್ಮ ಪೊಲೀಸ್ ಸಿಬ್ಬಂದಿಯ ಹೆಸರುಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿ, ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ ಉಪಸ್ಥಿತರಿದ್ದರು. ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅಧ್ಯಕ್ಷತೆ ವಹಿಸಿದ್ದರು.
ಪೊಲೀಸ್ ಅಧಿಕಾರಿಗಳು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಹುತಾತ್ಮ ಪೊಲೀಸರ ಗೌರವಾರ್ಥ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಶಸ್ತ್ರ ಗೌರವ ಸಲ್ಲಿಸಲಾಯಿತು.
ಡಿಸಿಪಿ ಶಾಲೂ, ಐಪಿಎಸ್ ಅಧಿಕಾರಿ ಸೌಮೇಂದು ಮುಖರ್ಜಿ, ಎಸಿಪಿ ಪ್ರವೀಣ ನಾಯಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣನವರ್ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು ಹಾಗೂ ನಿವೃತ್ತ ಪೊಲೀಸ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.






