Sedam | ಮತದಾರರ ಪರಿಷ್ಕರಣೆಗೆ ಕೈಜೋಡಿಸಿ; ಆ.3, 4ರಂದು ಗ್ರಾಮಸಭೆ: ಎ.ಸಿಪ್ರಭುರೆಡ್ಡಿ

ಸೇಡಂ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ನಿಖರ ಹಾಗೂ ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಸಹಕರಿಸಬೇಕು ಎಂದು ಸೇಡಂ ಉಪವಿಭಾಗದ ಸಹಾಯಕ ಆಯುಕ್ತ ಪ್ರಭುರೆಡ್ಡಿ ಕರೆ ನೀಡಿದರು.
ಪಟ್ಟಣದ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ಚುರುಕಾಗಿ ನಡೆಯುತ್ತಿದ್ದು, ಆಗಸ್ಟ್ 3 ಮತ್ತು 4ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಇದುವರೆಗೆ ಗಣತಿ ನಮೂನೆ ಸಲ್ಲಿಸದ ಮತದಾರರು, ಬೇರೆ ಊರು ಅಥವಾ ಸ್ಥಳಗಳಿಗೆ ತೆರಳಿರುವ ಕಾರಣ ನಮೂನೆ ಪಡೆಯದವರು, ನಮೂನೆ ಕಳೆದುಕೊಂಡವರು ಹಾಗೂ ಇತರೆ ಕಾರಣಗಳಿಂದ ನಮೂನೆ ಸಲ್ಲಿಸದೇ ಉಳಿದಿರುವವರು ಗ್ರಾಮಸಭೆಗಳಲ್ಲಿ ಭಾಗವಹಿಸಿ ತಮ್ಮ ವಿವರಗಳನ್ನು ಸಲ್ಲಿಸಬೇಕು ಎಂದು ಹೇಳಿದರು.
ಗ್ರಾಮಸಭೆಗಳಲ್ಲಿ ಗೈರು (Absent), ಶಾಶ್ವತವಾಗಿ ಸ್ಥಳಾಂತರಗೊಂಡ (Shifted), ಮೃತ (Dead) ಹಾಗೂ ನಕಲು (Duplicate) ಮತದಾರರ ಪಟ್ಟಿಯನ್ನು ಸಾರ್ವಜನಿಕರ ಪರಿಶೀಲನೆಗಾಗಿ ಪ್ರದರ್ಶಿಸಲಾಗುತ್ತದೆ. ಈ ಪಟ್ಟಿಯಲ್ಲಿ ತಪ್ಪಾಗಿ ಹೆಸರು ಸೇರಿದ್ದರೆ ಅಥವಾ ಸಂಬಂಧಿತ ಮತದಾರರು ಅರ್ಹರಾಗಿದ್ದರೆ ಗ್ರಾಮಸಭೆಯಲ್ಲಿಯೇ ಮಾಹಿತಿ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಹೆಸರನ್ನು ಮತದಾರರ ಪಟ್ಟಿಯಲ್ಲಿ ಮುಂದುವರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈತಪ್ಪದಂತೆ ಹಾಗೂ ಅನರ್ಹ ಹೆಸರುಗಳು ಉಳಿಯದಂತೆ ನಿಖರ ಪರಿಶೀಲನೆ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದ್ದು, ಗ್ರಾಮಸಭೆಗಳಲ್ಲಿ ಭಾಗವಹಿಸಿ ತಮ್ಮ ಹಾಗೂ ಕುಟುಂಬ ಸದಸ್ಯರ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಗ್ರಾಮಸಭೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಹಾಗೂ ದಾಖಲೆ ಪರಿಶೀಲನೆ ಸೇರಿದಂತೆ ವಿವಿಧ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಮತದಾರರ ಪಟ್ಟಿಯ ಶುದ್ಧೀಕರಣ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಭುರೆಡ್ಡಿ ಕರೆ ನೀಡಿದರು.






