ಕಲಬುರಗಿ| ಬಾವಿಯಲ್ಲಿ ಬಾಲಕನ ಮೃತದೇಹ ಪತ್ತೆ: ಕೊಲೆ ಆರೋಪಿಸಿದ ಕುಟುಂಬಸ್ಥರು

ಸೇಡಂ: ತಾಲೂಕಿನ ಅಳೋಳಿ ಗ್ರಾಮದ ಬಾವಿಯಲ್ಲಿ ಸೋಮವಾರ ಬೆಳಗಿನ ಜಾವ ಬಾಲಕನ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೋಷಕರು ಕೊಲೆ ಆರೋಪಿಸಿದ್ದಾರೆ.
ಮೃತ ಬಾಲಕನನ್ನು ನಿತೀಶ್ ಹುಳಗೋಳ(9) ಎಂದು ಗುರುತಿಸಲಾಗಿದೆ.
ರವಿವಾರ ಸಂಜೆ ಮೊಹರಂ ಹಬ್ಬದ ಪ್ರಯುಕ್ತ ಕಾರ್ಯಕ್ರಮ ವೀಕ್ಷಿಸಲು ತೆರಳಿದ್ದ ನಿತೀಶ್ ಮನೆಗೆ ಮರಳಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಇಡೀ ರಾತ್ರಿ ಗ್ರಾಮದಲ್ಲಿ ಹುಡುಕಾಟ ನಡೆಸಿದ್ದಾರೆ. ಬಳಿಕ ಮಗನ ಸುಳಿವು ಸಿಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸೇಡಂ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ದಾಖಲಿಸಿದ್ದಾರೆ. ಸೋಮವಾರ ಬೆಳಿಗ್ಗೆ 6 ಗಂಟೆ ವೇಳೆಗೆ ಬಾವಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ನಂತರ ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಬಾಲಕನ ತಂದೆ ರಾಜೇಂದ್ರ ಹುಳಗೋಳ, “ನನ್ನ ಮಗನ ಸಾವು ಆತ್ಮಹತ್ಯೆಯಲ್ಲ. ಇದು ಅನುಮಾನಾಸ್ಪದ ಸಾವು. ಇಡೀ ರಾತ್ರಿ ಹುಡುಕಿದರೂ ಮಗ ಸಿಕ್ಕಿರಲಿಲ್ಲ. ಬೆಳಗ್ಗೆ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ನ್ಯಾಯ ಕೊಡಿಸಬೇಕು” ಎಂದು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಸೇಡಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.






