ಶರಣಪ್ಪ ಮಟ್ಟೂರ ಗೆಲುವು ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಪೂರಕ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರನ್ನು ಬೆಂಬಲಿಸುವ ಮೂಲಕ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಯುವಜನರ ಭವಿಷ್ಯವನ್ನು ರಕ್ಷಿಸಲು ಶಿಕ್ಷಕರು ಮುಂದಾಗಬೇಕು ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.
ನಗರದ ಕೆ.ಎನ್.ಝಡ್. ಫಂಕ್ಷನ್ ಹಾಲ್ನಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಪರವಾಗಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ನೀಡುವ ಶಿಕ್ಷಣದಿಂದಲೇ ದೇಶದ ಯುವಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತಿದೆ. ಸಮೃದ್ಧ ಸಮಾಜ ನಿರ್ಮಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಹೀಗಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಶಿಕ್ಷಕರನ್ನು ಬೋಧನಾ ಕಾರ್ಯದ ಬದಲಾಗಿ ಮತದಾರರ ಪಟ್ಟಿ ಪರಿಷ್ಕರಣೆಯಂತಹ ಎಸ್ಐಆರ್ ಪ್ರಕ್ರಿಯೆಗಳಿಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಶಿಕ್ಷಕರ ಮುಖ್ಯ ಜವಾಬ್ದಾರಿ ಮಕ್ಕಳಿಗೆ ಪಾಠ ಮಾಡುವುದಾಗಿದೆ. ಶಾಂತಿ, ಸೌಹಾರ್ದತೆ ಮತ್ತು ಸಮೃದ್ಧ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದಿದೆ. ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮುಸ್ಲಿಮರು, ಆದಿವಾಸಿಗಳು ಹಾಗೂ ದಲಿತರ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಚುನಾವಣೆ ಕೇವಲ ಅಭ್ಯರ್ಥಿಯ ಆಯ್ಕೆಗೆ ಸೀಮಿತವಾಗಿಲ್ಲ; ಇದು ಶಿಕ್ಷಕರು ಹಾಗೂ ಅವರ ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಚುನಾವಣೆಯಾಗಿದೆ. ಯಾರನ್ನು ಆಯ್ಕೆ ಮಾಡುತ್ತೀರಿ ಎಂಬುದರ ಮೇಲೆ ಮುಂದಿನ ರಾಜಕೀಯ ದಿಕ್ಕು ನಿರ್ಧಾರವಾಗಲಿದೆ. ಬಿಜೆಪಿಯನ್ನು ಆಯ್ಕೆ ಮಾಡಿದರೆ ಬುಲ್ಡೋಜರ್ ರಾಜಕಾರಣಕ್ಕೆ ಅವಕಾಶ ಸಿಗುತ್ತದೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಬಲ ಸಿಗುತ್ತದೆ ಎಂದು ಹೇಳಿದರು.
ಚಿತ್ತಾಪುರದ ಒಂದು ಮತಗಟ್ಟೆಯಲ್ಲಿ 40 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ ಪ್ರಕರಣದ ಕುರಿತು ಮಾತನಾಡಿದ ಅವರು, ಈ ಸಂಬಂಧ 40 ಜನರನ್ನು ಕರೆಸಿ ಮಾಹಿತಿ ಪಡೆಯಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಸತ್ಯಾಸತ್ಯತೆ ಹೊರಬರಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಚುನಾವಣೆ ಬಂದಾಗ ಮಾತ್ರ ಬಿಜೆಪಿ ನಾಯಕರು ಹಿಂದೂ-ಮುಸ್ಲಿಮರು ಸಹೋದರರು ಎಂದು ಹೇಳುತ್ತಾರೆ. ಆದರೆ, ಉಳಿದ ಸಂದರ್ಭಗಳಲ್ಲಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪ್ರಯತ್ನ ಮಾಡುತ್ತಾರೆ ಎಂದು ಟೀಕಿಸಿದ ಅವರು, ಬಿಜೆಪಿಯವರು ಜಿಲ್ಲೆಗೆ ಮಾಡಿರುವ ಒಂದು ಪ್ರಮುಖ ಅಭಿವೃದ್ಧಿ ಕಾರ್ಯವನ್ನು ತಿಳಿಸಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಸರ್ಕಾರಕ್ಕೆ ಜನರು ಆಶೀರ್ವಾದ ನೀಡಿದಾಗಲೆಲ್ಲ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ತೋರಿಸಿದ್ದೇವೆ. ಸಂವಿಧಾನದ 371(ಜೆ) ವಿಧಿಯ ಜಾರಿಯಿಂದ ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗ, ಬಡ್ತಿ, ಶಿಕ್ಷಣ ಹಾಗೂ ಅಭಿವೃದ್ಧಿ ಅನುದಾನಗಳ ಪ್ರಯೋಜನ ದೊರೆಯುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಸುಮಾರು 11 ಸಾವಿರ ವೈದ್ಯರು ರೂಪುಗೊಂಡಿದ್ದು, 25 ಸಾವಿರ ಇಂಜಿನಿಯರಿಂಗ್ ಸೀಟುಗಳು ಈ ಭಾಗದ ವಿದ್ಯಾರ್ಥಿಗಳಿಗೆ ಲಭ್ಯವಾಗಿವೆ. ಈ ಸಾಧನೆಗೆ 371(ಜೆ) ವಿಧಿ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.
371(ಜೆ) ಸೌಲಭ್ಯ ಪಡೆಯಲು ಧರ್ಮ ಅಥವಾ ಜಾತಿಯನ್ನು ಪರಿಗಣಿಸುವುದಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಜನಿಸಿರುವುದನ್ನೇ ಆಧಾರವಾಗಿಟ್ಟುಕೊಂಡು ಅರ್ಹರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಈ ಭಾಗದ ಜನರ ಶೈಕ್ಷಣಿಕ ಹಾಗೂ ಉದ್ಯೋಗದ ಅವಕಾಶಗಳನ್ನು ವಿಸ್ತರಿಸುವಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಮಹತ್ವದ್ದಾಗಿದೆ ಎಂದರು.
ಕರ್ನಾಟಕವನ್ನು ಆರ್ಎಸ್ಎಸ್ ಮತ್ತು ಬಿಜೆಪಿ ರಾಜಕಾರಣದಿಂದ ರಕ್ಷಿಸುವ ಅಗತ್ಯವಿದೆ. ಸಂವಿಧಾನವನ್ನು ಉಳಿಸಿ, ಪ್ರಜಾಪ್ರಭುತ್ವವನ್ನು ಬಲಪಡಿಸಲು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಶಿಕ್ಷಕರಲ್ಲಿ ಮನವಿ ಮಾಡಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಇದೇ 23ರಂದು ನಡೆಯಲಿರುವ ಚುನಾವಣೆಯಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರಿಗೆ ಮತ ನೀಡಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಹಾಗೂ ಖಾಸಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದೆ. ದೇಶದಲ್ಲಿ ನಿರುದ್ಯೋಗ ಸೇರಿದಂತೆ ವಿವಿಧ ಸಮಸ್ಯೆಗಳ ವಿರುದ್ಧ ಯುವಜನರು ಹೋರಾಟ ನಡೆಸುತ್ತಿದ್ದಾರೆ. ಯುವಜನರಿಗೆ ಅವರ ಹಕ್ಕುಗಳನ್ನು ಒದಗಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಟೀಕಿಸಿದರು.
371(ಜೆ) ವಿಧಿಯ ಜಾರಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾವಿರಾರು ವೈದ್ಯರು ಮತ್ತು ಇಂಜಿನಿಯರ್ಗಳು ರೂಪುಗೊಳ್ಳಲು ಸಾಧ್ಯವಾಗಿದೆ. ಇದು ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಯತ್ನಗಳ ಫಲವಾಗಿದೆ. ಕಲಬುರಗಿಯಲ್ಲಿ ನಡೆದಿರುವ ಹಲವು ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕಿ ಖನೀಜ್ ಫಾತಿಮಾ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಚಂದ್ರಶೇಖರ ಪಾಟೀಲ್, ಜಗದೇವ ಗುತ್ತೇದಾರ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಝರ್ ಖಾನ್ ಆಲಂ, ತಿಮ್ಮಯ್ಯ ಪುರ್ಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.






