ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದ್ದರೆ ಮುಂಬರುವ ಅಧಿವೇಶನದಲ್ಲಿ ಚರ್ಚಿಸಿ, ಪರಿಹಾರ ಕಂಡುಕೊಳ್ಳಬೇಕು : ಸ್ಪೀಕರ್ ಯು.ಟಿ.ಖಾದರ್

ಕಲಬುರಗಿ : ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡಬೇಕೆಂದು ಒತ್ತಡ ಹೇರುತ್ತಿರುವ ಕುರಿತು ಪ್ರತ್ಯೇಕ ಬೇಡಿಕೆಯನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಶುಕ್ರವಾರ ನಗರದ ಐವಾನ್ -ಎ -ಶಾಹಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯು.ಟಿ. ಖಾದರ್, ನಾವು ಯಾವಾಗಲೂ ಸಕಾರಾತ್ಮಕ ಚಿಂತನೆಗಳನ್ನು ಮಾಡಬೇಕು. ಕರ್ನಾಟಕ ಒಂದು, ಭಾರತ ದೇಶ ಒಂದು. ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದ್ದರೆ, ನಾವೆಲ್ಲರೂ ಸೇರಿ ಮುಂಬರುವ ಅಧಿವೇಶನದಲ್ಲಿ ಚರ್ಚಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಡಿ.8ರಿಂದ ಡಿ.19ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಸರಕಾರ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಚಳಿಗಾಲದ ಅಧಿವೇಶನ ನಡೆಸಿಕೊಂಡು ಹೋಗಬೇಕು. ಉತ್ತರ ಕರ್ನಾಟಕ ಭಾಗದ ಹಲವಾರು ಸಮಸ್ಯೆಗಳನ್ನು ನಿವಾರಿಸಲು ಈ ಅಧಿವೇಶನ ಸಹಕಾರಿಯಾಗಬೇಕು ಎಂದು ಹೇಳಿದರು.
ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಸ್ಪೀಕರ್, ಬೆಳಗಾವಿ ಅಧಿವೇಶನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲಾಗುವುದು. ಆಡಳಿತ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಈ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು ಎಂದರು.







