ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯ : ಸಚಿವ ಶರಣಪ್ರಕಾಶ್ ಪಾಟೀಲ್

ಸೇಡಂ : ಜಿಲ್ಲೆಯ ಜನತೆಗೆ ಉತ್ತಮ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಹಾಗೂ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸಾರ್ವಜನಿಕರು ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಬದಲು, ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನೂತನ ಓ.ಪಿ.ಡಿ. (OPD) ಬ್ಲಾಕ್ ಹಾಗೂ ಬಿಪಿಎಚ್ ಲ್ಯಾಬ್ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಬಸವೇಶ್ವರ ವೃತ್ತದಿಂದ ಪೊಲೀಸ್ ಠಾಣೆವರೆಗೆ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿ ಉದ್ಘಾಟನೆ ಹಾಗೂ ಚೋಟಿ ಗಿರಣಿ ಸ್ಮಶಾನಕ್ಕೆ ತೆರಳುವ ರಸ್ತೆ ನಿರ್ಮಾಣ ಸೇರಿದಂತೆ ತಾಲೂಕಿನ ವಿವಿಧೆಡೆ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಅಡಿಗಲ್ಲು ನೆರವೇರಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಮೂಲಸೌಕರ್ಯ, ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಪರಿಣತ ವೈದ್ಯಕೀಯ ಸೇವೆಗಳನ್ನು ಹೆಚ್ಚಿಸುವ ಮೂಲಕ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಸೇಡಂ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಈಗಾಗಲೇ 100 ಹಾಸಿಗೆಗಳಿದ್ದು, ಅದನ್ನು 150 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸುವ ಕಾಮಗಾರಿ ಪ್ರಗತಿಯಲ್ಲಿದೆ. ನರ್ಸಿಂಗ್ ಕಾಲೇಜು ಹಾಗೂ ಹಾಸ್ಟೆಲ್ ನಿರ್ಮಾಣ ಕಾಮಗಾರಿಯೂ ನಡೆಯುತ್ತಿದ್ದು, ಜನವರಿಯೊಳಗೆ ಉದ್ಘಾಟನೆಗೊಳ್ಳಲಿದೆ ಎಂದು ಅವರು ಹೇಳಿದರು.
ಕಲಬುರಗಿ ಜಿಲ್ಲೆಯಲ್ಲಿಯೇ ಸೇಡಂ ಪಟ್ಟಣ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿದೆ. ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಸಮೃದ್ಧ ಸೇಡಂ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ವೈದ್ಯಕೀಯ ಶಿಕ್ಷಣ ಸಚಿವನಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಕಲಬುರಗಿ ಜಿಲ್ಲೆಯನ್ನು ‘ಹೆಲ್ತ್ ಹಬ್’ ಆಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಸೇಡಂ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕ್ಷೇತ್ರದ ಜನರ ಆಶೀರ್ವಾದ ವೈಯಕ್ತಿಕವಾಗಿ ತಮ್ಮ ಮೇಲೆಯೂ ಹಾಗೂ ಪಕ್ಷದ ಮೇಲೆಯೂ ಇರಲಿ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ತೋಟಗಾರಿಕೆ ಮಹಾಮಂಡಳಿ ನಿರ್ದೇಶಕ ಬಸವರಾಜ ಪಾಟೀಲ್ ಉಡಗಿ, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್ವರರಾವ್ ಮಾಲೀ ಪಾಟೀಲ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ ಪಾಟೀಲ್ ಬೊಮ್ಮನಳ್ಳಿ, ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್, ಸತೀಶರೆಡ್ಡಿ ಪಾಟೀಲ್ ರಂಜೋಳ, ತಹಶೀಲ್ದಾರ್ ಶ್ರೀಯಾಂಕ ಧನಶ್ರೀ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ನಾಗರಾಜ ಮನ್ನೆ, ಆರೋಗ್ಯ ಇಲಾಖೆಯ ಸಂತೋಷ ಹಾಲಗೂರ್, ಸಂಜೀವ ಪಾಟೀಲ್, ಎಇಇ ವಿಶ್ವನಾಥ, ಜಗನ್ನಾಥ ಚಿಂತಪಳ್ಳಿ, ವಿಲಾಸ ಗೌತಮ್, ಮಹಮ್ಮದ್ ಗೌಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬರಗಾಲ ಘೋಷಣೆಗೆ ಪ್ರಸ್ತಾವನೆ
ಕಲಬುರಗಿ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವ ವಿಚಾರದಲ್ಲಿ ಎನ್‌ಡಿಆರ್‌ಎಫ್ ನಿಯಮಗಳಡಿ ಸದ್ಯಕ್ಕೆ ಅಗತ್ಯ ಮಾನದಂಡಗಳು ಅನ್ವಯವಾಗುತ್ತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಮಳೆ ಕೊರತೆ ಮುಂದುವರಿದರೆ, ಪರಿಸ್ಥಿತಿಯನ್ನು ಪರಿಶೀಲಿಸಿ ಖಂಡಿತವಾಗಿಯೂ ಬರಗಾಲ ಘೋಷಣೆ ಮಾಡಲಾಗುವುದು. ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೆಸರು ಮತ್ತು ಉದ್ದು ಬೆಳೆದಿರುವ ರೈತರಿಗೆ ‘ಮಿಡ್ ಸೀಸನ್ ಲಾಸ್’ ಎಂದು ಪರಿಗಣಿಸಿ ಶೇ.25ರಷ್ಟು ವಿಮಾ ಪರಿಹಾರ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.






