ನೀಟ್ ಪರೀಕ್ಷೆ ನಡೆಸುವ ಯೋಗ್ಯತೆ ಕೇಂದ್ರ ಸರ್ಕಾರಕ್ಕಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್

ಸಚಿವ ಶರಣಪ್ರಕಾಶ್ ಪಾಟೀಲ್
ಕಲಬುರಗಿ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಕೇಂದ್ರ ಸರ್ಕಾರವು 23 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದ ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಪ್ರಕರಣ ನಡೆದಿದ್ದರೂ ಕೇಂದ್ರದ ಬಿಜೆಪಿ ಸರ್ಕಾರ ಯಾವುದೇ ನೈತಿಕ ಹೊಣೆ ಹೊತ್ತಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಚಿವರನ್ನಾಗಲಿ, ಅಧಿಕಾರಿಗಳನ್ನಾಗಲಿ ವಜಾಗೊಳಿಸದಿರುವುದು ಖಂಡನೀಯ ಎಂದರು.
ಕಳೆದ ಐದು ವರ್ಷಗಳಿಂದ ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆಯುತ್ತಿದ್ದು, ದೇಶದ ಪ್ರಮುಖ ಪರೀಕ್ಷೆಗಳಲ್ಲಿ ಒಂದಾದ ನೀಟ್ ಅನ್ನು ಪಾರದರ್ಶಕವಾಗಿ ಈ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಕೇಂದ್ರ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಆಡಳಿತ ವೈಫಲ್ಯದಿಂದಾಗಿ ಇಂದು ಸೇನೆಯ ಸಹಾಯದಿಂದ ಪರೀಕ್ಷೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಪರಿಣಾಮ ಹಲವಾರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, 12ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ. ಮೋದಿ ಅವರ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮ ಕೇವಲ ಪ್ರಚಾರದ ಗಿಮಿಕ್ ಆಗಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಬೆಂಗಳೂರಿನಲ್ಲಿ ಮೂವರು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಒಬ್ಬ ವಿದ್ಯಾರ್ಥಿನಿ ಹಳೆಯ ಹಾಲ್ಟಿಕೆಟ್ ತಂದುಕೊಂಡಿದ್ದರಿಂದ ಪರೀಕ್ಷೆಗೆ ಅವಕಾಶ ಸಿಗಲಿಲ್ಲ. ಮತ್ತೊಬ್ಬ ವಿದ್ಯಾರ್ಥಿ ತಪ್ಪು ಮಾರ್ಗದಲ್ಲಿ ತೆರಳಿದ್ದರಿಂದ ಪರೀಕ್ಷಾ ಕೇಂದ್ರ ತಲುಪಲು ತಡವಾಯಿತು. ಇನ್ನೊಬ್ಬ ವಿದ್ಯಾರ್ಥಿಯ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಸತ್ಯಾಂಶ ತಿಳಿಯದೇ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದರೂ, ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಯಾಕೆ ಮೌನ ವಹಿಸಿದ್ದಾರೆ ಎಂದು ಸಚಿವರು ಪ್ರಶ್ನಿಸಿದರು.






