ಕಲಬುರಗಿಯನ್ನು ದ್ವಿತೀಯ ಆಡಳಿತ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ಗೆ ಮನವಿ
ಕಲ್ಯಾಣ ಕರ್ನಾಟಕ ಪ್ರಜಾಸೌಧ ನಿರ್ಮಾಣಕ್ಕೆ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರವಾಗಿರುವ ಕಲಬುರಗಿಯನ್ನು ಪ್ರಾದೇಶಿಕ ಉಪರಾಜಧಾನಿ ಅಥವಾ ದ್ವಿತೀಯ ಆಡಳಿತ ಕೇಂದ್ರವಾಗಿ ಅಭಿವೃದ್ಧಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ನೇತೃತ್ವದ ನಿಯೋಗವು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಿತು.
ಭಾರತ ಸರಕಾರದ ನೀತಿ ಆಯೋಗದ ಉಪಾಧ್ಯಕ್ಷ ಡಾ. ಅಶೋಕ್ ಕುಮಾರ್ ಲಾಹಿರಿ ಅವರ ಶಿಫಾರಸಿನಂತೆ, ‘ಎರಡನೇ ಬೆಂಗಳೂರು’ ಪರಿಕಲ್ಪನೆಯಡಿ ಕಲಬುರಗಿಯನ್ನು ದ್ವಿತೀಯ ಆಡಳಿತ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಕಲ್ಯಾಣ ಕರ್ನಾಟಕದ ಆಡಳಿತಾತ್ಮಕ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡಲು ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಪ್ರಜಾಸೌಧ’ ನಿರ್ಮಿಸಬೇಕು. ಅಲ್ಲದೆ, ಪ್ರತಿ ವರ್ಷ ವಿಧಾನಮಂಡಲದ ಮಳೆಗಾಲದ ಅಧಿವೇಶನವನ್ನು ಕಲಬುರಗಿಯಲ್ಲಿ ನಡೆಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯ ಮಾಡಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಶಿಕ್ಷಣ, ಉದ್ಯೋಗ, ನೀರಾವರಿ, ಆರೋಗ್ಯ ಮತ್ತು ಸಾಮಾಜಿಕ ನ್ಯಾಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದ ಗಣ್ಯರ ಹೆಸರನ್ನು ಪ್ರಮುಖ ಸರಕಾರಿ ಸಂಸ್ಥೆಗಳು ಹಾಗೂ ಕಟ್ಟಡಗಳಿಗೆ ನಾಮಕರಣ ಮಾಡಬೇಕು ಎಂದು ನಿಯೋಗ ಆಗ್ರಹ ಮಾಡಿದೆ.
ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎನ್. ಧರ್ಮಸಿಂಗ್ ಮತ್ತು ವೀರೇಂದ್ರ ಪಾಟೀಲ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮಾಜಿ ಸಚಿವರಾಗಿದ್ದ ದಿವಂಗತ ಭೀಮಣ್ಣ ಖಂಡ್ರೆ ಅವರ ಹೆಸರನ್ನು ಪ್ರಮುಖ ಸರ್ಕಾರಿ ಸಂಸ್ಥೆಗಳು ಮತ್ತು ಕಟ್ಟಡಗಳಿಗೆ ನಾಮಕರಣ ಮಾಡುವ ಪ್ರಸ್ತಾವನೆಯನ್ನು ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಸೂಕ್ತ ಸರಕಾರಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಆಳಂದ ಕ್ಷೇತ್ರದ ಕೆಪಿಸಿಸಿ ಸದಸ್ಯ ಗುರುಶರಣ ಪಾಟೀಲ್, ಕಲಬುರಗಿ ಹೈಕೋರ್ಟ್‌ನ ಹಿರಿಯ ವಕೀಲ ಬಸವರಾಜ ಬಿರಾದಾರ, ಶಂಕ್ರಪ್ಪಗೌಡ ಹರನೂರ ಉಪಸ್ಥಿತರಿದ್ದರು.






