ಆರೋಗ್ಯ ಸೇವೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಅಗತ್ಯ: ಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ: ಆರೋಗ್ಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿರುವುದು ರೋಗಗಳ ನಿಖರ ಪತ್ತೆ ಹಾಗೂ ಸೂಕ್ತ ಚಿಕಿತ್ಸೆ ನೀಡಲು ಸಹಕಾರಿಯಾಗಿದೆ. ಜನರಿಗೆ ಗುಣಮಟ್ಟದ ವೈದ್ಯಕೀಯ ಪರೀಕ್ಷಾ ಸೌಲಭ್ಯಗಳು ಸುಲಭವಾಗಿ ಲಭ್ಯವಾಗಬೇಕು ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದರು.
ನಗರದ ಎಂ.ಎಸ್.ಕೆ. ಮಿಲ್ ರಸ್ತೆಯ ಕೇಂದ್ರ ಬಸ್ ನಿಲ್ದಾಣದ ಎದುರಿನ ಕಪಿಲಾ ಲಾಡ್ಜ್ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭಿಸಲಾದ ‘ಅದ್ವಿತಿ ಎಂಆರ್ ಡಯಾಗ್ನೋಸ್ಟಿಕ್ ಸೆಂಟರ್’ ಅನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಆಧುನಿಕ ಪರೀಕ್ಷಾ ವಿಧಾನಗಳಿಂದ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಗುಣಮಟ್ಟದ ವೈದ್ಯಕೀಯ ಪರೀಕ್ಷಾ ಕೇಂದ್ರಗಳು ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಭರಧ್ವಜ ಸ್ವಾಮೀಜಿ, ಡಾ. ಅರುಣಕುಮಾರ ಹರಿದಾಸ, ವಿನೋದಕುಮಾರ ಎಂ. ರೋಜಾ, ವಸಂತಕುಮಾರ ಎಂ. ರೋಜಾ, ಕೇಂದ್ರದ ವ್ಯವಸ್ಥಾಪಕ ಎಂ. ಕುಸುಮಾಕರ್, ಸಂಗನಬಸವ ಹಾಗೂ ಶಹಾಪುರದ ನಿವೃತ್ತ ಉಪನ್ಯಾಸಕ ಭೀಮರಾಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು.






