ವಾಡಿ | 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಾಡಿ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಹಾಗೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ 2013ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಾಡಿ ಪೊಲೀಸರು ಸುಮಾರು 13 ವರ್ಷಗಳ ಬಳಿಕ ಬಂಧಿಸಿದ್ದಾರೆ.
ಚಿತ್ತಾಪುರ ತಾಲೂಕಿನ ವಾಡಿ ಸಮೀಪದ ಕಡಬೂರು ಗ್ರಾಮದ ಮುಕ್ತುಂ ಶಹಾ ಮಹೆಬೂಬ್ ಶಹಾ ಬಾವಾಗೋಳ (38) ಬಂಧಿತ ಆರೋಪಿ. 2013ರಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಈತ, ಒಟ್ಟು ನಾಲ್ಕು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಪತ್ತೆಗಾಗಿ ಶಹಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಚಿತ್ತಾಪುರ ಸಿಪಿಐ ಎಸ್.ಸಿ. ಪಾಟೀಲ ಅವರ ಮಾರ್ಗದರ್ಶನದಲ್ಲಿ ವಾಡಿ ಪಿಎಸ್‌ಐ ತಿರುಮಲೇಶ ಕೆ. ಮತ್ತು ಚಿತ್ತಾಪುರ ಪಿಎಸ್‌ಐ ಮಂಜುನಾಥ ರೆಡ್ಡಿ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು.
ಆರೋಪಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ವಾಸವಾಗಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದರು. ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ವಿನೋದ ಕುಮಾರ, ರಸೂಲ್ ಖಾನ್, ಅಜರುದ್ದೀನ್ ಹಾಗೂ ಅಯ್ಯಣ್ಣ ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸ್ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಶಂಸಿಸಿದ್ದಾರೆ.




