ಅರ್ಹ ಮತದಾರರ ಹೆಸರು ಕೈಬಿಡದಂತೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಶಾಸಕ ಬಿ.ಆರ್.ಪಾಟೀಲ್

ಆಳಂದ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಧಿಕಾರಿಗಳು, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್‌ನ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಕರೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಾಗೂ ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಕೈಬಿಡುವುದು ಅಥವಾ ಅವರನ್ನು ಮತದಾನದ ಹಕ್ಕಿನಿಂದ ವಂಚಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.
ಎಸ್‌ಐಆರ್ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಪಕ್ಷಾತೀತವಾಗಿ ನಡೆಯಬೇಕು. ಈ ಪ್ರಕ್ರಿಯೆ ಯಶಸ್ವಿಯಾಗಿ ಜಾರಿಯಾಗಲು ರಾಜ್ಯ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ), ಚುನಾವಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.
ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ನೋಡಿಕೊಳ್ಳುವುದೇ ಈ ಪ್ರಕ್ರಿಯೆಯ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಉದ್ಯೋಗ, ಶಿಕ್ಷಣ ಹಾಗೂ ಜೀವನೋಪಾಯಕ್ಕಾಗಿ ಬೆಂಗಳೂರು, ಮುಂಬೈ, ಪುಣೆ, ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗಿರುವ ಮತದಾರರ ಮತದಾನದ ಹಕ್ಕು ಅಬಾಧಿತವಾಗಿರಬೇಕು. ಇಂತಹ ಮತದಾರರ ಕುಟುಂಬ ಸದಸ್ಯರು ಅಗತ್ಯ ದಾಖಲೆಗಳನ್ನು ಒದಗಿಸಿ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಮುಂದುವರಿಯುವಂತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ವಲಸೆ ಕಾರ್ಮಿಕರು, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ರೈತರು ಹಾಗೂ ಕಾರ್ಮಿಕರು ಸೇರಿದಂತೆ ಯಾವುದೇ ವರ್ಗದ ಮತದಾರರಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು. ತಾಂತ್ರಿಕ ದೋಷ, ನಿರ್ಲಕ್ಷ್ಯ ಅಥವಾ ಪಕ್ಷಪಾತದಿಂದ ಅರ್ಹ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಅವರು ಹೇಳಿದರು.
ಪ್ರಜಾಪ್ರಭುತ್ವದ ಶಕ್ತಿ ಮತದಾರನಲ್ಲಿದ್ದು, ಮತದಾರರ ಪಟ್ಟಿಯೇ ಚುನಾವಣಾ ವ್ಯವಸ್ಥೆಯ ಜೀವಾಳವಾಗಿದೆ. ಪ್ರತಿಯೊಬ್ಬ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿಕೊಳ್ಳಬೇಕು. ಯಾವುದೇ ಲೋಪ ಕಂಡುಬಂದಲ್ಲಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಎಸ್‌ಐಆರ್ ಕುರಿತು ಜನಜಾಗೃತಿ ಮೂಡಿಸುವ ಕೆಲಸ ಕೈಗೊಳ್ಳಬೇಕು ಎಂದು ಕರೆ ನೀಡಿದ ಅವರು, ಕೆಲವು ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜಕೀಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಗೊಂದಲ ಅಥವಾ ಅನುಮಾನಗಳಿಗೆ ಅವಕಾಶ ನೀಡದಂತೆ ಸರ್ಕಾರ, ಚುನಾವಣಾ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವುಪುತ್ರಪ್ಪ ಪಾಟೀಲ ಮುನ್ನೋಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಶರಣು ಭೂಸನೂರ, ಕಾಂಗ್ರೆಸ್ ಮುಖಂಡ ಸುಭಾಷ ಮುರುಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






