Yedrami | ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ : ಒಂದೇ ವಾರದಲ್ಲಿ 5 ಟ್ಯಾಕ್ಟರ್ ವಶ

ಯಡ್ರಾಮಿ: ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಯಡ್ರಾಮಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ನೂತನ ಪಿಎಸ್‌ಐ ತಿಮ್ಮಯ್ಯ ಅವರ ನೇತೃತ್ವದಲ್ಲಿ ಒಂದೇ ವಾರದಲ್ಲಿ ಅಕ್ರಮ ಮರಳು ಸಾಗಿಸುತ್ತಿದ್ದ ಐದು ಟ್ರ್ಯಾಕ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ತಾಲೂಕಿನ ವಿವಿಧೆಡೆ ನಿಯಮಬಾಹಿರವಾಗಿ ಮರಳು ಸಾಗಾಟ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ನಿಗಾ ವಹಿಸಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಪರವಾನಗಿ ಹಾಗೂ ಅಗತ್ಯ ದಾಖಲೆಗಳಿಲ್ಲದೆ ಮರಳು ಸಾಗಿಸುತ್ತಿದ್ದ ಐದು ಟ್ರ್ಯಾಕ್ಟರ್‌ಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಪಿಎಸ್‌ಐ ಆಗಿ ಅಧಿಕಾರ ಸ್ವೀಕರಿಸಿದ ಒಂದೇ ವಾರದಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ. ಪೊಲೀಸರ ಕ್ರಮದಿಂದ ಅಕ್ರಮ ಮರಳು ಸಾಗಾಟಗಾರರಲ್ಲಿ ಆತಂಕ ಮೂಡಿದ್ದು, ನಿಯಮ ಉಲ್ಲಂಘಿಸಿ ಮರಳು ಸಾಗಿಸುವವರ ವಿರುದ್ಧ ಮುಂದಿನ ದಿನಗಳಲ್ಲಿಯೂ ಕಾನೂನು ಕ್ರಮ ಮುಂದುವರಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಅಕ್ರಮ ಮರಳು ಸಾಗಾಟದ ಜೊತೆಗೆ ತಾಲೂಕಿನಲ್ಲಿ ನಡೆಯುತ್ತಿರುವ ಇತರೆ ಕಾನೂನುಬಾಹಿರ ಚಟುವಟಿಕೆಗಳ ಮೇಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.






