Yedrami | ಕಬ್ಬಿಗೆ ಟನ್‌ಗೆ 3,600 ರೂ. ನಿಗದಿಗೆ ಆಗ್ರಹ: ಉಗಾರ ಶುಗರ್ಸ್ ಎದುರು ಅಹೋರಾತ್ರಿ ಧರಣಿ ಎಚ್ಚರಿಕೆ

ಯಡ್ರಾಮಿ: ಕಬ್ಬಿಗೆ ಪ್ರತಿ ಟನ್‌ಗೆ ಕನಿಷ್ಠ 3,600 ರೂ. ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡರು ಹಾಗೂ ಕನ್ನಡಪರ ಹೋರಾಟಗಾರರು ಸಕ್ಕರೆ ಕಾರ್ಖಾನೆಯ ಎದುರು ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.
ಪಟ್ಟಣದ ಪತ್ರಿಕಾ ಭವನದಲ್ಲಿ ರವಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ (ಉತ್ತರ ಕರ್ನಾಟಕ) ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಸಾಹೇಬಗೌಡ ದೇಸಾಯಿ, ರೈತರು ಕಷ್ಟಪಟ್ಟು ಬೆಳೆದ ಕಬ್ಬಿಗೆ ಸೂಕ್ತ ಬೆಲೆ ದೊರೆಯದೆ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ದಿನದಿಂದ ದಿನಕ್ಕೆ ಕೃಷಿ ವೆಚ್ಚ, ಕಾರ್ಮಿಕರ ಕೂಲಿ, ಗೊಬ್ಬರ, ಕೀಟನಾಶಕ ಹಾಗೂ ಸಾಗಣೆ ವೆಚ್ಚಗಳು ಹೆಚ್ಚಾಗುತ್ತಿವೆ. ಆದರೆ ರೈತರು ಬೆಳೆದ ಕಬ್ಬಿಗೆ ಮಾತ್ರ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಇದರಿಂದ ಕಬ್ಬು ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬುಧವಾರ ಬೃಹತ್ ಪ್ರತಿಭಟನಾ ಮೆರವಣಿಗೆ :
ಪ್ರತಿ ಟನ್ ಕಬ್ಬಿಗೆ 3,600 ರೂ. ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಬುಧವಾರ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಿಂದ ಗಾಂಧಿನಗರ, ನಾಗರಹಳ್ಳಿ ಗ್ರಾಮದ ಮೂಲಕ ಉಗಾರ ಶುಗರ್ಸ್ ಸಕ್ಕರೆ ಕಾರ್ಖಾನೆಯವರೆಗೆ ಎತ್ತಿನ ಬಂಡಿ ಹಾಗೂ ಟ್ರ್ಯಾಕ್ಟರ್‌ಗಳ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ರೈತರ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸದಿದ್ದರೆ ತಾಲೂಕಿನ ನಾಗರಹಳ್ಳಿ ಗ್ರಾಮದ ಸಕ್ಕರೆ ಕಾರ್ಖಾನೆಯ ಎದುರು ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎರಡು ಸುತ್ತಿನ ಮಾತುಕತೆ ವಿಫಲ :
ಇತ್ತೀಚೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ನಡುವೆ ಎರಡು ಸುತ್ತಿನ ಮಾತುಕತೆ ನಡೆದಿದ್ದರೂ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಮೊದಲ ಸುತ್ತಿನ ಮಾತುಕತೆಯಲ್ಲಿ ಪ್ರತಿ ಟನ್‌ಗೆ 3,150 ರೂ. ನೀಡುವುದಾಗಿ ತಿಳಿಸಿದ್ದ ಕಾರ್ಖಾನೆ ಮಾಲೀಕರು, ಎರಡನೇ ಸುತ್ತಿನಲ್ಲಿ 3,200 ರೂ. ಕ್ಕಿಂತ ಹೆಚ್ಚಿನ ದರ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸಂಧಾನ ಪ್ರಕ್ರಿಯೆ ವಿಫಲವಾಗಿದೆ ಎಂದು ತಿಳಿಸಿದರು.
ರೈತರ ಬೆವರಿನ ಶ್ರಮಕ್ಕೆ ನ್ಯಾಯ ಸಿಗಲಿ :
ರೈತರು ಹಗಲಿರುಳು ಶ್ರಮಿಸಿ ಬೆಳೆದ ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯಲೇಬೇಕು. ರೈತರ ಬದುಕು ಹಸನಾಗಬೇಕಾದರೆ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಸೂಕ್ತ ಬೆಲೆ ನೀಡುವುದು ಅತ್ಯಗತ್ಯ. ಈ ಹೋರಾಟಕ್ಕೆ ರೈತರು, ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸಿ ಬೆಂಬಲಿಸಬೇಕು ಎಂದು ಸಾಹೇಬಗೌಡ ದೇಸಾಯಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಕರವೇ ಗೌರವಾಧ್ಯಕ್ಷ ಹಾಗೂ ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ಸಾಂಬಶಿವ ಹಿರೇಮಠ, ಹಸಿರು ಸೇನೆ ತಾಲೂಕು ಅಧ್ಯಕ್ಷ ಯಲ್ಲಲಿಂಗ ಹರನಾಳ ಸೇರಿದಂತೆ ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.






