ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರ ಪ್ರಯತ್ನ : ಸಿಎಂ ಸಿದ್ದರಾಮಯ್ಯ
"ರಾಜ್ಯದ ಮನವಿಗೆ ಕೇಂದ್ರ ಸರಕಾರ ಕಿವುಡಾಗಿದೆ"

ಕೊಡಗು: ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ಪಡೆಯಲು ನಿರಂತರವಾಗಿ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ. ಕೇಂದ್ರ ಸರ್ಕಾರ ಕಿವುಡಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ, ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಶಾಸಕರು , ಸಂಸದರು, ಸಚಿವರು ದೆಹಲಿಯಲ್ಲಿಯೇ ಪ್ರತಿಭಟನೆ ಮಾಡಿದೆವು. ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದರು. ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದರು.
ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಕ್ರಮ :
ವನ್ಯಜೀವಿ ಮಾನವ ಸಂಘರ್ಷ ಕಾಡಿಂಚಿನ ಊರುಗಳಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಆನೆಗಳು, ಚಿರತೆಗಳ ಸಂಖ್ಯೆ ಕರ್ನಾಟಕದಲ್ಲಿ ಹೆಚ್ಚಾಗಿದೆ. ಪ್ರಾಣಿಗಳು ಆಹಾರ ಮತ್ತು ನೀರಿಗಾಗಿ ಕಾಡಿನಿಂದ ನಾಡಿಗೆ ಬರುತ್ತಿವೆ. ಹಾಗಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ ಕೈಕೊಳ್ಳಲಾಗುವುದು ಎಂದರು.
ಕಾವೇರಿ ನದಿ ಸ್ವಚ್ಛತೆಯ ಬಗ್ಗೆ ರಚಿಸಲಾಗಿದ್ದ ಸಮಿತಿ ಇನ್ನೂ ವರದಿ ನೀಡಿಲ್ಲ. ವರದಿ ನೀಡಿದ ನಂತರ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.







