ಕೊಡಗಿನಲ್ಲಿ ಉತ್ತಮ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಅಧಿಕ ಮಳೆಯಾಗುತ್ತಿದೆ.
ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮಡಿಕೇರಿಯಲ್ಲಿ ನಿರಂತರ ಗಾಳಿಮಳೆಯಾಗುತ್ತಿದ್ದು, ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣದಿಂದ ಜನ ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದ್ದು, ಗ್ರಾಮೀಣ ಭಾಗದಲ್ಲಿ ನಷ್ಟ ಸಂಭವಿಸುತ್ತಿದೆ. ಕೆಲವು ಗ್ರಾಮಗಳಲ್ಲಿ ಮರ, ಬರೆ, ವಿದ್ಯುತ್ ಕಂಬ ಬಿದ್ದಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ರಸ್ತೆಗಳು ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾಗಿದೆ.
ಮಡಿಕೇರಿ ತಾಲೂಕಿನಲ್ಲಿ ಪ್ರಸ್ತುತ ವರ್ಷ ಜನವರಿಯಿಂದ ಇಲ್ಲಿಯವರೆಗೆ ನಿಗಧಿಗಿಂತ ಅಧಿಕ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.







