Kodagu | ಕೆರೆಗೆ ಬಿದ್ದ ಕಾರು ; ನಾಲ್ಕು ವರ್ಷದ ಮಗು ಸೇರಿ ಮೂವರು ಮೃತ್ಯು

ಕೊಡಗು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ದಂಪತಿ ಹಾಗೂ ಅವರ ನಾಲ್ಕು ವರ್ಷದ ಮಗು ಮೃತಪಟ್ಟ ಘಟನೆ ಸಿದ್ದಾಪುರ ಸಮೀಪದ ಬಾಣಂಗಾಲದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಸಿದ್ದಾಪುರ ಹೈಸ್ಕೂಲ್ ಪೈಸರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ (34) ಹಾಗೂ ಪುತ್ರಿ ಲಿಯಾ (4) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ಸಿದ್ದಾಪುರದಿಂದ ಬಾಣಂಗಾಲ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದಿದೆ ಎನ್ನಲಾಗಿದೆ.
ಬುಧವಾರ ತೋಟದ ಕಾರ್ಮಿಕರು ಕೆರೆಯಲ್ಲಿ ಕಾರು ಮುಳುಗಿರುವುದನ್ನು ಗಮನಿಸಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕಾರನ್ನು ಪತ್ತೆಹಚ್ಚಿ ಪರಿಶೀಲಿಸಿದಾಗ ಕಾರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story




