ಕುಶಾಲನಗರ | ನವಜಾತ ಶಿಶುವಿನ ಮೃತದೇಹ ಪತ್ತೆ

ಕುಶಾಲನಗರ : ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯ ಭವನದ ಬಳಿಯ ತೋಟದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಜನಿಸಿದ ಕೆಲವು ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಎಸೆದು ಹೋದ ಪರಿಣಾಮ ಶಿಶು ನಾಯಿಗಳ ಪಾಲಾಗಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ನಾಯಿಗಳನ್ನು ಓಡಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಗ್ರಾಪಂ ಸದಸ್ಯ ಆರ್.ಕೆ.ಚಂದ್ರು ಅವರು ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ತಾಲೂಕು ವೈದ್ಯಾಧಿಕಾರಿ ಇಂದೂಧರ್, ಕುಶಾಲನಗರ ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಗ್ರಾಮಾಂತರ ಠಾಣಾಧಿಕಾರಿ ಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ನಡೆಸಿದರು. ನಂತರ ಮೃತದೇಹವನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೂಕ್ತ ತನಿಖೆ ನಡೆಸಿ ಶಿಶುವನ್ನು ಎಸೆದು ಹೋದವರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆರ್.ಕೆ.ಚಂದ್ರು ಒತ್ತಾಯಿಸಿದರು.