ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ

ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಡಗು ಜಿಲ್ಲಾ ರೈತ ಹೋರಾಟ ಸಮಿತಿ ಮತ್ತು ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ ಪ್ರತಿಭಟನೆ ನಡೆಸಿದ ಪರಿಣಾಮ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ರೈತರು ಜಿಲ್ಲಾಧಿಕಾರಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ಆಲಿಸಬೇಕೆಂದು ಪಟ್ಟು ಹಿಡಿದರು. ಪರಿಣಾಮ ಮೈಸೂರು, ವೀರಾಜಪೇಟೆ ಹಾಗೂ ಮಂಗಳೂರು ರಸ್ತೆಗಳಲ್ಲಿ ಕಿಲೋಮೀಟರ್‍ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಹೋರಾಟ ಸಮಿತಿ ಸಂಚಾಲಕ ಸುರೇಶ್ ಚಕ್ರವರ್ತಿ ಮಾತನಾಡಿ, ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ ನಡೆಸಿ ಕಸ್ತೂರಿ ರಂಗನ್ ವರದಿಯ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ. ಕಸ್ತೂರಿ ರಂಗನ್ ವರದಿಯಿಂದ ಜಿಲ್ಲೆಯ 53 ಗ್ರಾಮಗಳು ಸೂಕ್ಷ್ಮ ಪರಿಸರ ವಲಯಕ್ಕೆ ಒಳಪಡಲಿವೆ. ಈ ಗ್ರಾಮಗಳೊಂದಿಗೆ ಬಫರ್ ಝೋನ್ ಸೇರ್ಪಡೆಯಾದರೆ ಜಿಲ್ಲೆಯ 295 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಸಿ ಮತ್ತು ಡಿ ಜಮೀನಿನಲ್ಲಿ ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬದುಕುತ್ತಿರುವ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಲಾಯಿತು. ಮುಕ್ಕೋಡ್ಲು ಗ್ರಾಮದ ಕೃಷಿಕ ನಾಣಿಯಪ್ಪ ಅವರ ತೋಟದಲ್ಲಿದ್ದ ಕಾಫಿ ಮತ್ತು ಏಲಕ್ಕಿ ಬೆಳೆಗಳನ್ನು ಅರಣ್ಯ ಇಲಾಖೆ ನಾಶಪಡಿಸಿದ ಪ್ರಕರಣದಲ್ಲೂ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಲಾಯಿತು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಜಿ. ಸೋಮಶೇಖರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಹಾಗೂ ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಸ್ಥಳಕ್ಕೆ ಆಗಮಿಸಿ ರೈತರ ಬೇಡಿಕೆಗಳನ್ನು ಆಲಿಸಿದರು.
ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಜಿಲ್ಲೆಯ ಜನರ ಭಾವನೆಗಳಿಗೆ ಅನುಗುಣವಾಗಿ ಸಕಾರಾತ್ಮಕವಾಗಿ ಸ್ಪಂದಿಸಿ ಸರ್ಕಾರಕ್ಕೆ ಮಾಹಿತಿ ಒದಗಿಸುವುದಾಗಿ ಜಿಲ್ಲಾಧಿಕಾರಿ ಸೋಮಶೇಖರ್ ಭರವಸೆ ನೀಡಿದರು. ಶಾಸಕ ಡಾ.ಮಂತರ್ ಗೌಡ ಅವರು ಸಿ ಮತ್ತು ಡಿ ಜಮೀನು ಸಮಸ್ಯೆ ಕುರಿತು ರಚಿಸಿರುವ ವಿಶೇಷ ತನಿಖಾ ಸಮಿತಿ ಸ್ಥಳೀಯ ಭಾವನೆಗಳನ್ನು ಪರಿಗಣಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.
ಇದೇ ವೇಳೆ ಮುಕ್ಕೋಡ್ಲು ಗ್ರಾಮದ ಸಂತ್ರಸ್ತ ಕೃಷಿಕ ನಾಣಿಯಪ್ಪ ಅವರಿಗೆ ಪರಿಹಾರ ನೀಡುವ ವಿಚಾರದಲ್ಲೂ ಜಿಲ್ಲಾಡಳಿತ ಕ್ರಮ ಕೈಗೊಂಡಿತು. ಪ್ರತಿಭಟನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನಾಣಿಯಪ್ಪ ಅವರ ಮೊಬೈಲ್‍ನಲ್ಲಿ ಅಂದಿನ ಘಟನೆಯ ದೃಶ್ಯಗಳನ್ನು ವೀಕ್ಷಿಸಿ ಮಾಹಿತಿ ಪಡೆದಿದ್ದರು. ಬಳಿಕ ನಾಣಿಯಪ್ಪ ಹಾಗೂ ಅವರ ಕುಟುಂಬವನ್ನು ಜಿಲ್ಲಾಧಿಕಾರಿ ಕಚೇರಿಗೆ ಕರೆಸಿ ಒಟ್ಟು 6 ಲಕ್ಷ ರೂ. ಮೌಲ್ಯದ ಚೆಕ್ ಅನ್ನು ಹಸ್ತಾಂತರಿಸಿದರು.
ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಪರಿಹಾರ ನೀಡುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರಸ್ತೆ ತಡೆ ಹಿಂಪಡೆದ ರೈತರು ಗಾಂಧಿ ಮೈದಾನಕ್ಕೆ ತೆರಳಿ ಬಹಿರಂಗ ಸಭೆ ನಡೆಸಿದರು.
ಪ್ರತಿಭಟನೆಯಲ್ಲಿ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ರೈತ ಹೋರಾಟ ಸಮಿತಿಯ ಬಿ.ಜೆ.ದೀಪಕ್, ಮಿಥುನ್ ಹರಗ, ದಿವಾಕರ ಕೂತಿ, ಕಾಂಗ್ರೆಸ್ ಪ್ರಮುಖ ನಾಪಂಡ ಮುತ್ತಪ್ಪ ಸೇರಿದಂತೆ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ರೈತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಇದಕ್ಕೂ ಮೊದಲು ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.






