ಕೊಡಗಿನಲ್ಲಿ ಮುಂದುವರಿದ ಗಾಳಿ ಮಳೆ | ಕಾವೇರಿ ತೀರದಲ್ಲಿ ಪ್ರವಾಹದ ಪರಿಸ್ಥಿತಿ, ಜನಜೀವನ ಅಸ್ತವ್ಯಸ್ತ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿಮಳೆ ಮುಂದುವರೆದಿದ್ದು, ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ ತೀರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ. ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 8 ಇಂಚು ಮಳೆಯಾಗಿದೆ.
ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುವಂತೆ ಸೂಚನೆ ನೀಡಿದರು.
ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆ ಅಪಾಯದ ಅಂಚಿನಲ್ಲಿದೆ. ತಹಶೀಲ್ದಾರ್ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ಹೆಚ್ಚಿರುವುದರಿಂದ ಸೇತುವೆಯಲ್ಲಿ ಪ್ರವಾಸಿಗರು ತೆರಳದಂತೆ ರಾಮೇಶ್ವರ ದೇವಾಲಯದ ಬಳಿಗೆ ಹೋಗುವ ಗೇಟ್ ಗೆ ಬೀಗ ಅಳವಡಿಸಲಾಗಿದೆ.
ನಿರಂತರ ಮಳೆಯಿಂದಾಗಿ ಚೇರಂಬಾಣೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಂಗೂರು ಗ್ರಾಮದ ದೋಣಿ ಕಾಡು ರಸ್ತೆ ಜಲಾವೃತಗೊಂಡಿದೆ. ಸ್ಥಳಕ್ಕೆ ಮಡಿಕೇರಿ ತಾಲ್ಲೂಕು ತಹಶೀಲ್ದಾರರು ಭೇಟಿ ನೀಡಿ ಪರಿಶೀಲಿಸಿದರು. ಸಾರ್ವಜನಿಕರ ಅನುಕೂಲಕ್ಕಾಗಿ ದೋಣಿ ವ್ಯವಸ್ಥೆ ಕಲ್ಪಿಸಲಾಗಿದೆ. ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.
ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಮುಂಜಾಗೃತಾ ಕ್ರಮವಾಗಿ ಇಂದು ಮಧ್ಯಾಹ್ನ 18 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.
ತಲಕಾವೇರಿ ಹಾಗೂ ಭಾಗಮಂಡಲ ಭಾಗದಲ್ಲಿ ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ 8 ಇಂಚು ಮಳೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಜಿಲ್ಲೆಯ ಹಲವೆಡೆ ಅಧಿಕ ಮಳೆಯಿಂದ ಗದ್ದೆ, ಕಾಫಿ ಮತ್ತು ಅಡಿಕೆ ತೋಟಗಳು ಜಲಾವೃತಗೊಂಡಿವೆ. ಗ್ರಾಮೀಣ ಭಾಗದಲ್ಲಿ ಮರ ಮತ್ತು ವಿದ್ಯುತ್ ಕಂಬ ಬಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ ಅವಧಿಗೂ ಮೊದಲೇ 60 ಇಂಚು ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 75.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 989.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 496.42 ಮಿ.ಮೀ ಮಳೆಯಾಗಿತ್ತು.