ವಿರಾಜಪೇಟೆ | ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಸಾಂದರ್ಭಿಕ ಚಿತ್ರ
ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ತೋಟದ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಸಮೀಪದ ಕಾಫಿ ತೋಟವೊಂದರಲ್ಲಿ ನಡೆದಿದೆ.
ತೋಟದ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ಹನುಮಂತ (57) ಎಂಬುವವರೇ ಕಾಡಾನೆ ದಾಳಿಗೆ ಬಲಿಯಾದವರು. ಜೊತೆಯಲ್ಲಿದ್ದ ಮತ್ತೋರ್ವ ಕಾರ್ಮಿಕ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ಮತ್ತು ಸೂಕ್ತ ಕ್ರಮದ ಭರವಸೆ ನೀಡಿದರು.
ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಲ್ಲಿ ಅರಣ್ಯ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಾರ್ಮಿಕ ಸಂಘಟನೆಯ ಮುಖಂಡ ಹೆಚ್.ಎಂ.ಸೋಮಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಡಾನೆ ದಾಳಿಯ ಆತಂಕದಿಂದ ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದು, ಈ ಸಮಸ್ಯೆಯನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಜಿ.ಪಂ ಮಾಜಿ ಸದಸ್ಯ ವಿಜು ಸುಬ್ರಮಣಿ ಮಾತನಾಡಿ, ಸರಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾಡಾನೆ ಉಪಟಳ ಹೆಚ್ಚಾಗಲು ಕಾರಣ ಎಂದು ಆರೋಪಿಸಿದರು.





